ವಿವಾದಿತ ರೈತ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯ ನಿರ್ದೇಶಿಸಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.
ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದರು.
प्रधानमंत्री जी कोई सो रहा हो उसे जगाया जा सकता है, जिसे ग़लतफ़हमी हो उसे समझाया जा सकता है मगर जो सोने की ऐक्टिंग करे, नासमझने की ऐक्टिंग करे उसे आपके समझाने से क्या फ़र्क़ पड़ेगा? ये वही आतंकी हैं CAA से एक भी इंसान की सिटिज़ेन्शिप नहीं गयी मगर इन्होंने ख़ून की नदियाँ बहा दी. https://t.co/ni4G6pMmc3
— Kangana Ranaut (@KanganaTeam) September 20, 2020
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!
ಕಂಗನಾ ವಿರುದ್ಧ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್.ರಮೇಶ್ ನಾಯಕ್ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.
2020 ರ ಸೆಪ್ಟೆಂಬರ್ 21 ರಂದು ರಾಣಾವತ್ ತನ್ನ ಟ್ವಿಟ್ಟರ್ ಖಾತೆ ‘ಕಂಗನಾಟೀಮ್’ ನಿಂದ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156 (3) ರ ಅಡಿಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ದೂರು ದಾಖಲಿಸಿದ್ದರು.
ನಟಿಯ ವಿರುದ್ಧ ಪೊಲೀಸ್ ಅಧಿಕಾರಿಗಳು ಅಥವಾ ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳದ ಹಿನ್ನೆಲೆ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ನಟಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 504, 108 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ದೂರುದಾರರು ಕೋರಿದ್ದಾರೆ.
ನಟಿಯ ಟ್ವೀಟ್ ವಿರುದ್ಧ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ರೈತ ಸಂಘಟನೆಗಳು, ರೈತ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದರು.


