ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾರ್ಚ್ 15ಕ್ಕೆ ಪ್ರಕರಣದ ವಿಚಾರಣೆ ನಿಗದಿಪಡಿಸಿರುವ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ, ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದ್ದು, ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿದೆ.
ತನ್ನ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿ 7ರಂದು ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಆದರೆ, ಪ್ರಕರಣ ರದ್ದುಗೊಳಿಸಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು.
ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.
ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.


