ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ.
ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.
ಜಾಮೀನು ಅವಧಿಯಲ್ಲಿ ಸಂತ್ರಸ್ತೆಯ ಮನೆಯ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಹೋಗಬಾರದು. ಜಾಮೀನು ರದ್ದಾಗುವವರೆ ದೆಹಲಿಯಲ್ಲೇ ಇರಬೇಕು ಹಾಗೂ ಪ್ರತಿ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಿ ವರದಿ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.
“ಯಾವುದೇ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದಾಗುತ್ತದೆ” ಎಂದು ನ್ಯಾಯಾಲಯ ಎಚ್ಚರಿಸಿದೆ.
17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂ. ದಂಡ ವಿಧಿಸಿ ವಿಚಾರಣಾ ನ್ಯಾಯಾಲ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಮೇಲ್ಮನವಿ ಸಲ್ಲಿಸಿದ್ದಾರೆ.
ಸೆಂಗಾರ್ 17 ವರ್ಷದ ಬಾಲಕಿಯನ್ನು ಅಪಹರಿಸಿ 2017ರ ಜೂನ್ 11ರಿಂದ 20 ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಆಕೆಯನ್ನು 60 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದ. ಕೊನೆಗೆ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರು.
ಈ ನಡುವೆ ಸೆಂಗಾರ್‌ನ ಅನತಿಯಂತೆ ಪೊಲೀಸರು ಬಾಲಕಿಗೆ ನಿರಂತರ ಬೆದರಿಕೆ ಹಾಕಿದ್ದರು. ದೌರ್ಜನ್ಯದ ವಿರುದ್ದ ಮಾತನಾಡದಂತೆ ಬಾಯಿ ಮುಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಅಂತಿಮವಾಗಿ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಬಳಿಕ ಪೊಲೀಸರು ಸೆಂಗಾರ್ ವಿರುದ್ದ ಅಪಹರಣ, ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಆಗಸ್ಟ್ 2019ರಲ್ಲಿ, ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿ, ದಿನನಿತ್ಯದ ವಿಚಾರಣೆ ನಡೆಸಿ 45 ದಿನಗಳಲ್ಲಿ ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು.
ಡಿಸೆಂಬರ್ 2019ರಲ್ಲಿ, ವಿಚಾರಣಾ ನ್ಯಾಯಾಲಯವು ಸೆಂಗಾರ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಅಲ್ಲದೆ, ಕುಟುಂಬ ಬಯಸಿದರೆ ಸುರಕ್ಷಿತ ಮನೆ ಮತ್ತು ಗುರುತಿನ ಬದಲಾವಣೆಯ ಮೂಲಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜೀವನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು ಸಿಬಿಐ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯವು ನಿರ್ದೇಶಿಸಿತು.
ಸೆಂಗಾರ್‌ಗೆ ಗರಿಷ್ಠ ಶಿಕ್ಷೆ ವಿಧಿಸುವಾಗ, ವಿಚಾರಣಾ ನ್ಯಾಯಾಲಯವು ಆತನಿಗೆ ಶಿಕ್ಷೆ ಕಡಿತಗೊಳಿಸುವ ಯಾವುದೇ ಅಗತ್ಯತೆ ಇಲ್ಲ ಎಂದಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸೇವಕನಾಗಿದ್ದ ಸೆಂಗಾರ್ ಜನರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.
ನ್ಯಾಯಾಲಯ ಸೆಂಗಾರ್‌ಗೆ ಶಿಕ್ಷೆ ವಿಧಿಸುವ ಮುನ್ನ, ನಂಬರ್ ಪ್ಲೇಟ್ ಇಲ್ಲದ ಲಾರಿಯೊಂದು ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ವಕೀಲರು ಗಂಭೀರವಾಗಿ ಗಾಯಗೊಂಡಿದ್ದರು. ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು.
ಈ ಸಂಬಂಧ ಸೆಂಗಾರ್ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ 2021ರಲ್ಲಿ, ಅಪಘಾತವನ್ನು ಸೆಂಗಾರ್ ಅವರೇ ಆಯೋಜಿಸಿದ್ದಾರೆ ಎಂಬುದಕ್ಕೆ ಯಾವುದೇ ಪ್ರಾಥಮಿಕ ಪುರಾವೆಗಳು ದೊರೆಯದ ಕಾರಣ ದೆಹಲಿ ನ್ಯಾಯಾಲಯವು ಅವರನ್ನು ಈ ಪ್ರಕರಣದಿಂದ ಬಿಡುಗಡೆ ಮಾಡಿತು.


