Homeಮುಖಪುಟಉನ್ನಾವೊ ಎಸ್ಪಿ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡಿದ್ದ ದಲಿತ ಯುವಕ ಸಾವು

ಉನ್ನಾವೊ ಎಸ್ಪಿ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡಿದ್ದ ದಲಿತ ಯುವಕ ಸಾವು

- Advertisement -
- Advertisement -

ಉತ್ತರಪ್ರದೇಶದ ಉನ್ನಾವೊ ಎಸ್ಪಿ ಕಚೇರಿಯ ಹೊರಗೆ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಪೊಲೀಸರು ತನಗೆ ನ್ಯಾಯ ಒದಗಿಸಲಿಲ್ಲ ಎಂದು ಆರೋಪಿಸಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪೂರ್ವ ಕೊತ್ವಾಲಿ ಪ್ರದೇಶದ ಬುಲೆಮಾವು ಗ್ರಾಮದ ನಿವಾಸಿ ಶ್ರೀಚಂದ್ರ(28) ಬುಧವಾರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ 60% ಸುಟ್ಟ ಗಾಯಗಳೊಂದಿಗೆ ಅವರ ಸ್ಥಿತಿ ಗಂಭೀರವಾಗಿತ್ತು.

ಶ್ರೀಚಂದ್ರ ಅವರು ತನಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಮೃತನ ಪತ್ನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಆಕ್ರೋಶಗೊಂಡ ಸ್ಥಳೀಯರು ಮತ್ತು ಕುಟುಂಬಸ್ಥರು ಪೂರ್ವಾ ಅಚಲಗಂಜ್ ರಸ್ತೆಯಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮೃತನ ಸಹೋದರ, ಗ್ರಾಮದಲ್ಲಿ ತಮ್ಮ ಪೂರ್ವಜರ ಜಮೀನನ್ನು ಕೆಲವರು  ಅತಿಕ್ರಮಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಕೊಲೆ ಮಾಡುವ ಉದ್ದೇಶದಿಂದ ಕುಟುಂಬದ ಮೇಲೆ ಹಲ್ಲೆ ನಡೆಸಿ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಪೊಲೀಸರು ದೂರುದಾರರ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಶ್ರೀಚಂದ್ರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಿದ್ದಾರೆ.

ಘಟನೆಯ ಸಂಬಂಧ ಪೊಲೀಸರು ತಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತನ ಸಹೋದರ ಆರೋಪಿಸಿದ್ದು, ಪೊಲೀಸರು ಪ್ರಕರಣದಲ್ಲಿ ಮೂವರ ಹೆಸರನ್ನು ತೆಗೆದುಹಾಕಿದ್ದಾರೆ. ಆರೋಪಿಗಳಿಗೆ ಸಹಾಯ ಮಾಡಿಕೊಂಡು ನಮ್ಮ ಕುಟುಂಬದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಉನ್ನಾವೋ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಖಿಲೇಶ್ ಸಿಂಗ್ ಈ ಕುರಿತು ಮಾತನಾಡಿದ್ದು, ಘಟನೆಯ ನಂತರ ಪೂರ್ವಾ ಸರ್ಕಲ್ ಆಫೀಸರ್ ದೀಪಕ್ ಕುಮಾರ್ ಸಿಂಗ್ ಮತ್ತು ಪೂರ್ವಾ ಸ್ಟೇಷನ್ ಹೌಸ್ ಆಫೀಸರ್ ಸುರೇಶ್ ಕುಮಾರ್ ಅವರನ್ನು ತಮ್ಮ ಹುದ್ದೆಯಿಂದ ತೆಗೆದುಹಾಕಲಾಗಿದೆ. ಸಂತ್ರಸ್ತನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

ಎಸ್ಪಿ ಸಿದ್ಧಾರ್ಥ್ ಶಂಕರ್ ಮೀನಾ ಅವರು ಪ್ರತಿಕ್ರಿಯಿಸಿ ಈ ಕುರಿತು ವಿವರವಾದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ ಎಸ್ಪಿ ಕಚೇರಿಗೆ ಆಗಮಿಸಿದ್ದ ಶ್ರೀಚಂದ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಇತರರು ಬೆಂಕಿಯನ್ನು ನಂದಿಸಿ  ಶ್ರೀಚಂದ್‌ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಪ್ರಾಥಮಿಕ ವಿಚಾರಣೆಯ ವೇಳೆ ಶ್ರೀಚಂದ್ ತನ್ನ ನೆರೆಮನೆಯ ಮುಮ್ತಾಜ್ ಕುಟುಂಬದ ಜೊತೆ ಜಮೀನಿನ ವಿಚಾರದಲ್ಲಿ ಜಗಳ ಮಾಡಿಕೊಂಡಿರುವುದು ಪತ್ತೆಯಾಗಿತ್ತು.

ಇದನ್ನು ಓದಿ; ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಓರ್ವ ಮೃತ್ಯು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...