ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಸುಮಾರು 49.67 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತಿರುವುದನ್ನು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.
ಏನಿದು ‘ಆಶೀರ್ವಾದ ಕಾ ದಿಯಾ’?
ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳನ್ನು ಗುರುತಿಸುವ ಉದ್ದೇಶದಿಂದ ಬಿಜೆಪಿ ಬಿಹಾರದಲ್ಲಿ ಸೆಪ್ಟೆಂಬರ್ 17ರಿಂದ ‘ಸೇವಾ ಸಂಕಲ್ಪ ಅಭಿಯಾನ’ ಆರಂಭಿಸುತ್ತಿದೆ. ಸೆಪ್ಟೆಂಬರ್ 17ರಂದು ಸಂಜೆ 7 ಗಂಟೆಗೆ ನಡೆಯಲಿರುವ ‘ಆಶೀರ್ವಾದ ಕಾ ದಿಯಾ’ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಮನೆಗಳಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸುವಂತೆ ಬಿಜೆಪಿ ಕರೆ ನೀಡಿದೆ.
ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರತ್ಯಯ್ ಅಮೃತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲೂ ‘ಸೇವಾ ಸಂಕಲ್ಪ ಅಭಿಯಾನ’ದ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ. ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯಲಿರುವ ಅಭಿಯಾನದ ಮೊದಲ ದಿನ ‘ಆಶೀರ್ವಾದ ಕಾ ದಿಯಾ’ ಕಾರ್ಯಕ್ರಮದಡಿ ರಾಜ್ಯದ ಮನೆಗಳು ಹಾಗೂ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ದೀಪ ಬೆಳಗಿಸುವ ಯೋಜನೆ ಇದೆ.
ಪ್ರವಾಹದ ನಡುವೆ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ
ಪ್ರವಾಹ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಆರ್ಜೆಡಿ ನಾಯಕ ಹಾಗೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿದ್ದಾರೆ.
ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪರಿಹಾರ, ಆಹಾರ, ಕುಡಿಯುವ ನೀರು, ಔಷಧಿ ಸೇರಿದಂತೆ ಮೂಲಭೂತ ನೆರವು ಒದಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ಅವರ ನಿಲುವಾಗಿದೆ. ಪ್ರವಾಹ ಪರಿಹಾರ ಕಾರ್ಯಗಳು ಸಮರ್ಪಕವಾಗಿಲ್ಲ ಎಂದು ಅವರು ಈ ಹಿಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದರು.
ರಾಷ್ಟ್ರೀಯ ವಿಪತ್ತು ಘೋಷಣೆ, ₹5,000 ಕೋಟಿ ನೆರವಿಗೆ ಬೇಡಿಕೆ
ಇದಕ್ಕೂ ಮುನ್ನ ಸೆಪ್ಟೆಂಬರ್ 7ರಂದು ತೇಜಸ್ವಿ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಬಿಹಾರದ ಪ್ರವಾಹ ಪರಿಸ್ಥಿತಿಯನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಪರಿಹಾರ, ರಕ್ಷಣಾ ಕಾರ್ಯ ಹಾಗೂ ಪುನರ್ವಸತಿಗಾಗಿ ಬಿಹಾರಕ್ಕೆ ₹5,000 ಕೋಟಿ ವಿಶೇಷ ಕೇಂದ್ರ ನೆರವು ನೀಡಬೇಕು ಎಂದು ಒತ್ತಾಯಿಸಿದ್ದರು.
ಪ್ರವಾಹ ಸಂತ್ರಸ್ತರಿಗೆ ಆಹಾರ, ಸುರಕ್ಷಿತ ಕುಡಿಯುವ ನೀರು, ಔಷಧಿ, ವಿದ್ಯುತ್, ಪಶು ಆಹಾರ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳು ಸಿಗುತ್ತಿಲ್ಲ ಎಂದು ತೇಜಸ್ವಿ ತಮ್ಮ ಪತ್ರದಲ್ಲಿ ಆರೋಪಿಸಿದ್ದರು.
15 ಜಿಲ್ಲೆಗಳಲ್ಲಿ 49.67 ಲಕ್ಷ ಜನರಿಗೆ ಪ್ರವಾಹದ ಹೊಡೆತ
ಬಿಹಾರ ಸರ್ಕಾರದ ಸೆಪ್ಟೆಂಬರ್ 15ರ ಮಾಹಿತಿಯ ಪ್ರಕಾರ, ಪಾಟ್ನಾ, ಭೋಜ್ಪುರ, ಸಾರಣ್, ವೈಶಾಲಿ, ಭಾಗಲ್ಪುರ, ಬೇಗುಸರಾಯ್, ಬಕ್ಸರ್, ಸಮಸ್ತಿಪುರ, ಮುಂಗೇರ್, ಕಟಿಹಾರ್, ಲಖಿಸರಾಯ್, ಖಗಡಿಯಾ, ಪೂರ್ಣಿಯಾ, ಮಧೇಪುರಾ ಮತ್ತು ಅರಾರಿಯಾ ಸೇರಿದಂತೆ 15 ಜಿಲ್ಲೆಗಳಲ್ಲಿ ಸುಮಾರು 49.67 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ.
ಗಂಗಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೇಲಿದ್ದರೂ, ಕೆಲವು ಪ್ರದೇಶಗಳಲ್ಲಿ ನೀರಿನ ಮಟ್ಟ ಇಳಿಯಲು ಆರಂಭಿಸಿದೆ ಎಂದು ವರದಿಯಾಗಿದೆ. ಇದೇ ವೇಳೆ ಪ್ರವಾಹ ಪರಿಹಾರ ಕಾರ್ಯಗಳು ಮುಂದುವರಿದಿವೆ.
ಹೀಗಾಗಿ ಒಂದೆಡೆ ಪ್ರವಾಹ ಪರಿಹಾರ ಮತ್ತು ಹಾನಿ ಪರಿಶೀಲನೆ ನಡೆಯುತ್ತಿರುವಾಗಲೇ ಮತ್ತೊಂದೆಡೆ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ‘ಆಶೀರ್ವಾದ ಕಾ ದಿಯಾ’ ಕಾರ್ಯಕ್ರಮ ನಡೆಯುತ್ತಿರುವುದು ಬಿಹಾರದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.


