ರಾಜ್ಯದಲ್ಲಿ ನಡೆದ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನರ ತೀರ್ಪು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಮುನಿರತ್ನ ಅವರು ಭಾರಿ ಬಹುಮತದೊಂದಿಗೆ, ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇತ್ತ ಶಿರಾ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ವಿಜಯ ಸಾಧಿಸಿದ್ದಾರೆ.
“ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ” ಎಂದು ಟ್ವೀಟ್ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. 1/7#BypollResults
— Siddaramaiah (@siddaramaiah) November 10, 2020
ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?
ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಕೂಟ ಕಾರಣ ಎಂದು ಆರೋಪಿಸಿರುವ ಸಿದ್ದರಾಮಯ್ಯ, “ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ. ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.
’ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ’ ಎಂದಿದ್ದಾರೆ.
ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ
ಡಿಕೆ ಸಹೋದರರ ಪ್ರತಿಷ್ಠೆಯ ಕಣ ಎಂದೇ ಗುರುತಿಸಲಾದ ಆರ್‌ಆರ್ ನಗರದ ಸೋಲಿನ ಬಗ್ಗೆ ಸಂಸದ ಡಿ.ಕೆ.ಸುರೇಶ್ ಕೂಡ ಟ್ವೀಟ್ ಮಾಡಿ, ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ ಎಂದಿದ್ದಾರೆ.
ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಪಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ.
— DK Suresh (@DKSureshINC) November 10, 2020
“ಮೊದಲಿಗೆ RR ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ” ಎಂದಿದ್ದಾರೆ.
ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಜನರ ತೀರ್ಫಿಗೆ ತಲೆಬಾಗುತ್ತೇನೆ ಎಂದಿದ್ದಾರೆ. ಆರ್‌ಆರ್ ನಗರ ಜನತೆಗೆ ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.
#nimmakusuma pic.twitter.com/BHiGscmAbA
— Kusuma Hanumantharayappa (@KusumaH_INC) November 10, 2020
ಉಪಚುನಾವಣೆ ಸೋಲನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಆದರೆ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಒಪ್ಪಿಕೊಂಡಿದೆ. ಸೋಲಿನ ಬಗ್ಗೆ, ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚಿಸುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.


