ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವವರೆಗೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿ “ಮಧ್ಯಂತರ ಜಾಮೀನು” ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಅರ್ಜಿದಾರನಿಗೆ 75,000ರೂ. ದಂಡವನ್ನು ವಿಧಿಸಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ನ್ಯಾಯಾಲಯವು ಹೇಳಿದ್ದು, ಅರ್ಜಿದಾರರಿಗೆ 75,000ರೂ.ದಂಡವನ್ನು ವಿಧಿಸಿದೆ.
‘ವೀ ದಿ ಪೀಪಲ್ ಆಫ್ ಇಂಡಿಯಾ’ ಎಂಬ ಹೆಸರಿನಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯನ್ನು ಸಮರ್ಥನೀಯವಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಲಯವು ತನ್ನ ರಿಟ್ ವ್ಯಾಪ್ತಿಯಲ್ಲಿರುವ ಪ್ರಕರಣಗಳಲ್ಲಿ ಉನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿಯೆಂದು ಆರೋಪಿಗೆ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್ ಕಿಂಗ್‌ಪಿನ್ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್ ಹೇಳಿತ್ತು ಮತ್ತು ಈ ಕುರಿತ ಮೂರನೇ ಅರ್ಜಿದಾರರಿಗೆ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.


