ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ.
ಸೆಂಗಾರ್‌ಗೆ ವಿಧಿಸಲಾಗಿರುವ 10 ವರ್ಷಗಳ ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾಯಮೂರ್ತಿ ರವೀಂದರ್ ದುಡೇಜಾ ನಿರಾಕರಿಸಿದ್ದಾರೆ.
ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ ಎಂದಿರುವ ನ್ಯಾಯಮೂರ್ತಿ, ಸೆಂಗಾರ್ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸೆಂಗಾರ್ ದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರೂ, ವಿಳಂಬದ ಆಧಾರದ ಮೇಲೆ ಪರಿಹಾರ ನೀಡಲು ಸಾಧ್ಯವಿಲ್ಲ. ಏಕೆಂದರೆ, ವಿಚಾರಣಾ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿರುವ ಆದೇಶದ ವಿರುದ್ದ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ವಿಳಂಬವಾಗಲು ಅವರೇ ಕಾರಣ. ಅವರು ಹಲವು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಹಾಗಾಗಿ, ವಿಳಂಬವಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಜೂನ್ 2024ರಲ್ಲಿ, ದೆಹಲಿ ಹೈಕೋರ್ಟ್ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸೆಂಗಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ವಜಾಗೊಂಡಿರುವುದು ಎರಡನೇ ಅರ್ಜಿಯಾಗಿದೆ.
“ಮೇಲ್ಮನವಿಯನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸಿದರೆ ಉದ್ದೇಶ ಈಡೇರುತ್ತದೆ” ಎಂದಿರುವ ನ್ಯಾಯಾಧೀಶರು, ಫೆಬ್ರವರಿ 3ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.
ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು ಮಾರ್ಚ್ 13, 2020 ರಂದು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಒಂದು ಕುಟುಂಬದ ‘ಏಕೈಕ ಆಧಾರಸ್ತಂಭ’ವನ್ನು ಕೊಂದಿದ್ದಕ್ಕೆ ಯಾವುದೇ ದಯೆ ತೋರಿಸಲು ಸಾಧ್ಯವಿಲ್ಲ ಎಂದು ಶಿಕ್ಷೆ ವಿಧಿಸುವಾಗ ವಿಚಾರಣಾ ನ್ಯಾಯಾಲಯ ಹೇಳಿತ್ತು.
ಪ್ರಕರಣದಲ್ಲಿ ಸೆಂಗಾರ್ ಜೊತೆಗೆ ಆತನ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಸೆಂಗಾರ್‌ನ ಆಜ್ಞೆಯ ಮೇರೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ಏಪ್ರಿಲ್ 9, 2018ರಂದು ಅವರು ಕಸ್ಟಡಿಯಲ್ಲಿ ನಿಧನರಾಗಿದರು. ಇದಕ್ಕೂ ಮುನ್ನ 2027ರಲ್ಲಿ ಬಿಜೆಪಿ ಶಾಸಕನಾಗಿದ್ದ ಸೆಂಗಾರ್ ಕೆಲಸ ಕೇಳಿಕೊಂಡು ಬಂದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ.
ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು 2025ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಅಮಾನತಿನಲ್ಲಿಟ್ಟಿತ್ತು. ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಇದರ ವಿರುದ್ದ ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಪ್ರತಿಭಟಿಸಿದ್ದರು. ದೇಶದಾದ್ಯಂತ ನ್ಯಾಯಾಲಯ ಆದೇಶದ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.


