ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.
ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.
ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಅಧಿಕಾರಿಗಳ ಹಿಂದೇಟು, ಕಾರಣವೇನು?
ಎಂ.ಎನ್ ಅನುಚೇತ್ ಅವರು ಯಾವುದೇ ಭಯದಿಂದ ಧರ್ಮಸ್ಥಳ ಪ್ರಕರಣದ ತನಿಖೆಯಿಂದ ದೂರು ಉಳಿಯುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 2009ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್ ಅವರು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ಮೊದಲ ಭಾರಿಗೆ ಅಧಿಕಾರ ವಹಿಸಿಕೊಂಡಿದ್ದರು. ಅನುಚೇತ್ ಅವರು ಪುತ್ತೂರಿನ ಎಎಸ್‌ಪಿಯಾಗಿದ್ದಾಗಲೇ ಸೌಜನ್ಯ ಪ್ರಕರಣ ನಡೆದಿತ್ತು.
ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಸಬ್-ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ನಾಯಕ್ ಅವರ ಮೇಲೆ ಈಗಾಗಲೇ ಸಾಕ್ಷ ನಾಶದ ಗಂಭೀರ ಆರೋಪಗಳಿವೆ. ಇವರೊಂದಿಗೆ ಆ ವೇಳೆ ತಮ್ಮ ಮೇಲೂ ಆಗಾಗ ಇಂತಹ ಆರೋಪಗಳು ಸ್ಥಳೀಯರಿಂದ ಕೇಳಿಬಂದಿವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಅನುಚೇತ್ ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.
ಈ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ಅನುಚೇತ್ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇನ್ನೊಬ್ಬರು ಅಧಿಕಾರಿ ಸೌಮ್ಯಲತಾ ಅವರೂ ಎಸ್‌ಐಟಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಅವರು ಯಾವ ಕಾರಣದಿಂದ ತನಿಖೆಯಿಂದ ದೂರ ಉಳಿಯುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.


