ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ.
ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಈಗ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದರು.
ಕಾಂಗ್ರೆಸ್ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ವೈಯಕ್ತಿಕವಾಗಿ ನನಗಿದೆ. ದೆಹಲಿಯಲ್ಲಿಯೂ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಹೈಕಮಾಂಡ್ ನಾಯಕರು ಕರೆದಿಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವ ಕೆಲ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ ಅವರು, ಆ ಪ್ರಯತ್ನಕ್ಕೆ ಕೈಹಾಕಿದರೆ ಮುಖಭಂಗ ಎದುರಿಸುತ್ತಾರೆ. ಆ ಸಾಮರ್ಥ್ಯ ಅವರಿಗೆಲ್ಲಿದೆ ಎಂದರು.
ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಅವರಿಗೆ ಇದು ಗೊತ್ತು. ಅನಗತ್ಯ ರಾಜಕೀಯ ಮಾಡುವ ಬದಲು ಜನರ ವಿಷಯಗಳ ಬಗ್ಗೆ ಚರ್ಚೆ ಮಾಡಲಿ. ಪ್ರತಿಪಕ್ಷವಾಗಿ ಸಮಯವನ್ನು ಸದುಪಯೋಗ ಮಾಡಿಕೊಳ್ಳುತ್ತಾರೋ ಅಥವಾ ವ್ಯರ್ಥ ಮಾಡುತ್ತಾರೋ ಅವರೇ ನಿರ್ಧರಿಸಲಿ ಎಂದರು.


