ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ಮಾಹಿತಿ ವರದಿ (ಇಸಿಐಆರ್) ದಾಖಲಿಸಿದೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯ ಕುಟುಂಬವು ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.
ನ್ಯಾಯಾಲಯದ ಆದೇಶದಂತೆ ಸೆಪ್ಟೆಂಬರ್ 27ರಂದು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ವಿರುದ್ದ ಮೈಸೂರಿನ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ಮೂಲವಾಗಿಟ್ಟುಕೊಂಡು ಇಡಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ದ ಇಸಿಐಆರ್ ದಾಖಲಿಸಿದೆ ಎಂದು ತಿಳಿದು ಬಂದಿದೆ.
ಇಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇತರ ತನಿಖಾ ಸಂಸ್ಥೆಗಳು ದಾಖಲಿಸಿದ ಎಫ್‌ಐಆರ್ ಅವಲಂಬಿಸಬೇಕಾಗುತ್ತದೆ. ಪ್ರಸ್ತುತ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅಧ್ಯಯನ ನಡೆಸಿದ ಬಳಿಕ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ದ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಇಸಿಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಇಸಿಐಆರ್ ಎಂಬುವುದು ಎಫ್‌ಐಆರ್ ಅನ್ನು ಹೋಲುತ್ತದೆ. ಆದರೆ, ಇದನ್ನು ಆರೋಪಿಗಳೊಂದಿಗೆ ಹಂಚಿಕೊಳ್ಳುವ ಅಗತ್ಯವಿಲ್ಲ. ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬಾಗಿಲು ತೆರೆದು ಕೊಡುತ್ತದೆ.
ಇದನ್ನೂ ಓದಿ : ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR


