ಪ್ರಸ್ತುತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಕಾರಣಕ್ಕೆ ನಿಲ್ಲುವುದಿಲ್ಲ ಎಂದು ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ. ಪರೀಕ್ಷೆಗಳ ಹಿಂದೆಯೇ ತರಗತಿಗಳು ಆರಂಭವಾಗುತ್ತವೆ ಎಂದು ಬೆಂಗಳೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.
“ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲಾ ವಿಭಾಗದ ಪರೀಕ್ಷೆಗಳು ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ. 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಆಫ್‌ಲೈನ್ ಮತ್ತು ಆನ್‌ಲೈನ್ ತರಗತಿಗಳು ಇರುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ
ಆಪ್‌ಲೈನ್ ಆಯ್ಕೆ ಮಾಡಿಕೊಂಡು ಕಾಲೇಜಿಗೆ ಬರುವರವರ ಸುರಕ್ಷತೆಗೆ ಕಾಲೇಜಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ನಿಯಮಾವಳಿ ಪ್ರಕಾರ ಎಲ್ಲ ವ್ಯವಸ್ಥೆ ಮಾಡಲಾಗಿರುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಜೇಷನ್, ದೈಹಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ.
1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳು
ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್) ಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್ ಪಿಸಿಗಳನ್ನು ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!


