ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪ ಹೊತ್ತಿರುವ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜೂನ್ 4ರಂದು ಹೊರಬಿದ್ದ ಫಲಿತಾಂಶದಲ್ಲಿ ಜಯಗಳಿಸಿದ್ದರು. ಈ ಬೆನ್ನಲ್ಲೇ ಜೂನ್ 6ರಂದು ಕಂಗನಾ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
“ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ವರ್ಗಾಯಿಸಲಾಗಿದೆ. ಅವರ ಅಮಾನತನ್ನು ಹಿಂತೆಗೆದುಕೊಳ್ಳಲಾಗಿದೆ, ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ” ಎಂದು ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಫಸ್ಟ್ಪೋಸ್ಟ್ , ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ವಾರ್ತಾಭಾರತಿ ಸೇರಿದಂತೆ ಕೆಲ ಮಾಧ್ಯಮಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿ ಸುಳ್ಳು ಎಂದು ಸಿಎಸ್ಐಎಫ್ ಸ್ಪಷ್ಟನೆ ನೀಡಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.
“ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತಿನಲ್ಲಿರಿಸಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ” ಎಂದು ಸಿಎಸ್ಐಎಫ್ ಹೇಳಿರುವುದಾಗಿ ಎಎನ್ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ಬೆಂಗಳೂರಿನಲ್ಲಿ ನಿಯೋಜಿಸಲಾಗಿದೆ ಎಂದು ಪತ್ರಕರ್ತ ಗಗನ್‌ದೀಪ್ ಸಿಂಗ್ ಸುಳ್ಳು ಸುದ್ದಿ ಹಂಚಿಕೊಂಡಿದ್ದಾರೆ” ಎಂದು ಓನ್ಲಿ ಫ್ಯಾಕ್ಟ್ ಇಂಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ, ಫ್ರೀ ಪ್ರೆಸ್ ಜರ್ನಲ್ ಸೇರಿದಂತೆ ಪ್ರಮುಖ ಮಾಧ್ಯಮಗಳು ಕೂಡ “ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಇನ್ನೂ ಅಮಾನತಿನಲ್ಲಿದ್ದಾರೆ. ಅವರನ್ನು ಬೆಂಗಳೂರಿಗೆ ವರ್ಗಾಯಿಸಿಲ್ಲ” ಎಂದು ವರದಿ ಮಾಡಿವೆ.
ಕೆಲ ಮಾಧ್ಯಮಗಳು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಆಧಾರವಾಗಿಟ್ಟುಕೊಂಡು ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ಧಾಣಕ್ಕೆ ವರ್ಗಾಯಿಸಲಾಗಿದೆ ಎಂದು ತಪ್ಪಾದ ಸುದ್ದಿ ಪ್ರಕಟಿಸಿರುವುದು ನಮ್ಮ ಪರಿಶೀಲನೆಯಲ್ಲಿ ಕಂಡು ಬಂದಿದೆ.
ಇದನ್ನೂ ಓದಿ : FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್


