Homeಕರ್ನಾಟಕಪ್ರಚೋದನಾಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದಾವಣಗೆರೆ, ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಪ್ರಚೋದನಾಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದಾವಣಗೆರೆ, ಬೆಂಗಳೂರಿನಲ್ಲಿ ಪ್ರಕರಣ ದಾಖಲು

- Advertisement -
- Advertisement -

ಸಂಸದ ಡಿಕೆ ಸುರೇಶ್‌ ಮತ್ತು ವಿನಯ್‌ ಕುಲಕರ್ಣಿ ವಿರುದ್ಧ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆ ಮತ್ತು ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆ.ಎಸ್.ಈಶ್ವರಪ್ಪ ಅವರು ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೀಡಿರುವ ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡುತ್ತದೆ. ಗಲಭೆ ಉಂಟಾಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಐಪಿಸಿ 505(1)(ಸಿ), 505(2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಕೇಸ್ ದಾಖಲು:

ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಯಶವಂತಪುರ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಎಸ್ ಗೌಡ ಯಶವಂತಪುರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ದಾವಣಗೆರೆಯ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿಕೆ ಸುರೇಶ್ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬಹಿರಂಗವಾಗಿ ಭಾಷಣದ ಮೂಲಕ ಭಯೋತ್ಪಾದನೆಗೆ ಪ್ರಚೋದಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಸಂಸದ ಡಿಕೆ ಸುರೇಶ್ ಅವರಿಗೆ ಪೊಲೀಸ್ ಭದ್ರತೆ ನೀಡಬೇಕು ಎಂದು ದೂರು ದಾಖಲಿಸಿದ್ದಾರೆ.

ಈಶ್ವರಪ್ಪ ಹೇಳಿಕೆಯಲ್ಲೇನಿದೆ?

ದಾವಣಗೆರೆ ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಈಶ್ವರಪ್ಪ, ಡಿ.ಕೆ.ಸುರೇಶ್‌, ವಿನಯ್‌ ಕುಲಕರ್ಣಿ ಇಂತಹ ರಾಷ್ಟ್ರದ್ರೋಹಿಗಳು ದೇಶವನ್ನು ಛಿದ್ರಗೊಳಿಸಲು ಹೊರಡುತ್ತಾರಲ್ಲ, ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತರಬೇಕು, ಇದು ನಮ್ಮ ಒತ್ತಾಯ, ಏನನ್ಕೊಂಡಿದ್ದೀರಿ ದೇಶ ಅಂದ್ರೆ, ಭಾರತಾಂಬೆಯ ಮಕ್ಕಳು ನಾವು, ದೇಶವನ್ನು ತುಂಡು ಮಾಡಲು ಹೊರಟಿರುವ ದೇಶದ್ರೋಹಿಗಳನ್ನು ಮೊದಲು ಕಿತ್ತಾಕಿ ಎಂದು ಹೇಳಿದ್ದಾರೆ.

ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ:

ಸಂಸದ ಡಿಕೆ ಸುರೇಶ್‌ ಕುರಿತು ಈಶ್ವರಪ್ಪ ನೀಡಿದ್ದ ಪ್ರಚೋದನಾಕರಿ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ ಗುಂಡು ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ ಎಂದು ಪೋಸ್ಟ್ ಮಾಡಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕುರಿತು ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

0
ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಹೂಡಿರುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಫೆಬ್ರವರಿ 29ಕ್ಕೆ ನಿಗದಿಪಡಿಸಿದೆ. ಶಾಹಿ ಈದ್ಗಾ ಇಂತೇಜಾಮಿಯಾ ಸಮಿತಿಯು ಕತ್ರ...