ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಆಪ್ತ ಸುರೇಶ್ ಬಾಬು ವಿರುದ್ದ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಲೋಕಾಯುಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ನೀಡಿರುವ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.
ಈ ಹಿಂದೆ ಚಂದ್ರಶೇಖರ್ ಅವರು ನೀಡಿರುವ ದೂರು ಆಧರಿಸಿ ಎನ್‌ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಈಗ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
“ಕುಮಾರಸ್ವಾಮಿ ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ” ಎಂದು ಚಂದ್ರಶೇಖರ್ ತನ್ನ ದೂರಿನಲ್ಲಿ ಆರೋಪಿಸಿದ್ದರು.
“ಅಲ್ಲದೆ, ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ಅವರೂ ನನ್ನ ವಿರುದ್ದ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ದ ಕ್ರಮ ಕೈಗೊಳ್ಳುವಂತ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಬೆದರಿಕೆ ಒಡ್ಡಿದ್ದಾರೆ” ಎಂದು ಎಡಿಜಿಪಿ ಚಂದ್ರಶೇಖರ್ ದೂರಿದ್ದರು.
ಇದನ್ನೂ ಓದಿ : ಸಿ.ಪಿ ಯೋಗೇಶ್ವರ್ ವಿರುದ್ಧ ಹೇಳಿಕೆ ನೀಡದಂತೆ ಪುತ್ರಿ ನಿಶಾಗೆ ಹೈಕೋರ್ಟ್ ನಿರ್ಬಂಧ


