ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆಯನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿರಲಿದ್ದಾರೆ ಹಾಗೂ ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು.
ಬಳಿಕ, ಡಿಸೆಂಬರ್ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಳೆದ ಶನಿವಾರ ಹೇಳಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ನಡೆದ ಉನ್ನತ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ್ದ ಅವರು, ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದರು.
ನವೆಂಬರ್ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿತ್ತು. ಹಿಮೋಡಯಾಲಿಸಿಸ್ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ, 4ಬಾಣಂತಿಯರು ಸಾವಿಗೀಡಾಗಿದ್ದರು.
ಇದನ್ನೂ ಓದಿ: ಬಳ್ಳಾರಿ | ಬಾಣಂತಿಯರ ಸಾವು : 5 ಲಕ್ಷ ಪರಿಹಾರ, ತನಿಖೆಗೆ ತಂಡ ರಚನೆ


