ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತರೊಬ್ಬರು ಸುಮಾರು 400ಕ್ಕೂ ಹೆಚ್ಚು ‘ಫಾರ್ಮ್ 6’ ಅರ್ಜಿಗಳನ್ನು ಒಟ್ಟಾಗಿ ಚುನಾವಣಾಧಿಕಾರಿ ಕಚೇರಿಗೆ ತರುತ್ತಿದ್ದಾಗ ಟಿಎಂಸಿ ಬೆಂಬಲಿತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರನ್ನು ತಡೆದಿದ್ದಾರೆ ಎನ್ನಲಾಗಿದೆ.
ಇದರಿಂದ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಅದು ಕಲ್ಲು ತೂರಾಟಕ್ಕೆ ತಿರುಗಿದೆ. ಚುನಾವಣಾಧಿಕಾರಿಯ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಜಖಂಗೊಂಡಿವೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಮತ್ತು ಸ್ಥಳದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.
ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರು ಕಚೇರಿಗೆ ಭೇಟಿ ನೀಡಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರದಂತಹ ಹೊರ ರಾಜ್ಯದವರನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಟಿಎಂಸಿ ಆರೋಪಿಸಿದೆ. ಸುಮಾರು 30,000 ಅರ್ಜಿಗಳನ್ನು ಅಕ್ರಮವಾಗಿ ಸಲ್ಲಿಸಲಾಗಿದೆ ಎಂದು ಅಭಿಷೇಕ್ ಬ್ಯಾನರ್ಜಿ ದೂರಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಇದು ‘ಮತದಾರರ ಅಪಹರಣ’ ಎಂದು ಕರೆದಿದ್ದಾರೆ.
ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರು, ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಎಷ್ಟು ಫಾರ್ಮ್ 6 ಅರ್ಜಿಗಳನ್ನು ಬೇಕಾದರೂ ಸಲ್ಲಿಸಬಹುದು ಮತ್ತು ಅರ್ಜಿ ಈ ಸಲ್ಲಿಕೆಗೆ ಈಗ ಯಾವುದೇ ಕಾಲಮಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.


