ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ದೇಶ ವಿರೋಧಿ” ಎಂದು ಕರೆದ ಕಾಂಗ್ರೆಸ್‌ನ ದೆಹಲಿ ನಾಯಕ ಅಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ವಿಪಕ್ಷಗಳ ಮೈತ್ರಿಯಾದ ಇಂಡಿಯಾ ಒಕ್ಕೂಟದಿಂದ ತೆಗೆದುಹಾಕಲು ಪ್ರಯತ್ನಿಸುವುದಾಗಿ ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನಾಯಕತ್ವವು ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಅತಿಶಿ ಆರೋಪಿಸಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಅವರು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನಿನ್ನೆ, ಕಾಂಗ್ರೆಸ್‌ನ ಹಿರಿಯ ನಾಯಕ ಅಜಯ್ ಮಾಕನ್ ಅವರು [ಎಎಪಿ ಅಧ್ಯಕ್ಷ] ಅರವಿಂದ್ ಕೇಜ್ರಿವಾಲ್ ದೇಶ ವಿರೋಧಿ ಎಂದು ಹೇಳಿದ್ದಾರೆ. ಅವರು ಯಾವುದಾದರೂ ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆಯೇ ಎಂದು ನಾನು ಕಾಂಗ್ರೆಸ್ ಪಕ್ಷವನ್ನು ಕೇಳಲು ಬಯಸುತ್ತೇನೆ. ಇಲ್ಲ ಅಲ್ಲವೆ? ಅಂತಹ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ಆರೋಪಿಸುತ್ತಿದೆ” ಎಂದು ಮುಖ್ಯಮಂತ್ರಿ ಆತಿಶಿ ಆರೋಪಿಸಿದ್ದಾರೆ.
ಎಎಪಿ ಪಕ್ಷವು ಕಲ್ಯಾಣ ಯೋಜನೆಗಳ ಭರವಸೆಯೊಂದಿಗೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಆಡಳಿತರೂಢ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಿತ್ತು. ಇದನ್ನು ಕಾಂಗ್ರೆಸ್ ಯಾಕೆ ಮಾಡಿದೆ ಎಂದು ಅತಿಶಿ ಕೇಳಿದ್ದಾರೆ. “ಕಾಂಗ್ರೆಸ್ ಇದುವರೆಗೆ ಯಾವುದೇ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದೆಯೇ? ಬಿಜೆಪಿಯೊಂದಿಗೆ ಯಾವುದೇ ಒಪ್ಪಂದ ಮಾಡಿಲ್ಲ ಎಂದಾದರೆ ಕಾಂಗ್ರೆಸ್ ಮಾಕೆನ್ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಕ್ಷವು “ದೇಶವಿರೋಧಿ” ಎಂದಾದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಏಕೆ ಸ್ಪರ್ಧಿಸಿದ್ದೀರಿ ಎಂದು ಅತಿಶಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ, ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯಂತಹ ವಿಷಯಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಸಾರ್ವಜನಿಕ ನಿಲುವಿನ ಹಿನ್ನೆಲೆಯಲ್ಲಿ ಮಾಕೆನ್ ಅವರು ಕೇಜ್ರಿವಾಲ್ ಅವರನ್ನು “ದೇಶವಿರೋಧಿ” ಎಂದು ಬುಧವಾರ ಕರೆದಿದ್ದಾರೆ ಎಂದು ವರದಿಯಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ “ತಪ್ಪು” ಮಾಡಿದೆ ಎಂದು ಮಾಕನ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
2013ರಲ್ಲಿ ಎಎಪಿಗೆ ನಾವು ನೀಡಿದ ಬೆಂಬಲವೆ ಇಂದಿನ ದೆಹಲಿ ಮತ್ತು ಕಾಂಗ್ರೆಸ್‌ನ ದುಸ್ಥಿತಿಗೆ ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು. “ಬಹುಶಃ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ತಪ್ಪು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸಿದ್ದರೂ, ಎಲ್ಲಾ ಏಳು ಸ್ಥಾನಗಳಲ್ಲಿ ಸೋತಿದ್ದವು. ಅಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು.


