ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನೀಡಿರುವ ಅರ್ಜಿಗೆ ಸಂಬಂಧಿಸಿದಂತೆ ಒಂದೇ ದಿನದಲ್ಲಿ ನೋಟಿಸ್ ಜಾರಿ ಮಾಡಿರುವ ರಾಜ್ಯಪಾಲರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು 10 ತಿಂಗಳಿನಿಂದ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ವರದಿಯಾಗಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿ.ಜೆ ಅಬ್ರಹಾಂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಜುಲೈ 26ರಂದು ಅರ್ಜಿ ಸಲ್ಲಿಸಿದ್ದರು. ಮರುದಿನ, ಅಂದರೆ ಜುಲೈ 27ರಂದೇ ಈ ಸಂಬಂಧ ವಿವರಣೆ ಕೋರಿ ರಾಜ್ಯಪಾಲರು ಸಿಎಂಗೆ ನೋಟಿಸ್ ಜಾರಿ ಮಾಡಿದ್ದಾರೆ.
ಆದರೆ, ಗಣಿ ಅಕ್ರಮ ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ಎಸ್‌ಐಟಿ, ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 10 ತಿಂಗಳ ಹಿಂದೆಯೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಆದರೂ, ಇದುವರೆಗೂ ಆ ವಿಚಾರದಲ್ಲಿ ರಾಜ್ಯಪಾಲರು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಈದಿನ.ಕಾಮ್ ವರದಿ ಮಾಡಿದೆ.
ಹೆಚ್.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಅಂದರೆ ಅಕ್ಟೋಬರ್ 6, 2007ರಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೋಗಸ್ ಸಂಸ್ಥೆಗೆ ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪ ಅವರ ಮೇಲಿತ್ತು. ಗುತ್ತಿಗೆ ನೀಡುವಾಗ ಮಿನರಲ್ಸ್ ಕನ್ಸಿಷನ್ ನಿಯಮಗಳ, ನಿಯಮ 59 (2)ನ್ನು ಉಲ್ಲಂಘಿಸಿ ಕುಮಾರಸ್ವಾಮಿಯವರು ಮಂಜೂರು ಮಾಡಿದ್ದರು ಎಂದು ಹೇಳಲಾಗಿತ್ತು. ಈ ಅಕ್ರಮದ ಕುರಿತಾಗಿ ಎಫ್‌ಐಆರ್ ದಾಖಲಾಗಿ ಲೋಕಾಯುಕ್ತದ ಎಸ್‌ಐಟಿಯು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ತನಿಖೆ ಪೂರ್ಣಗೊಂಡ ನಂತರ ಹೆಚ್.ಡಿ. ಕುಮಾರಸ್ವಾಮಿ ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಚ್‌ಶೀಟ್ ಹಾಕಲಾಗಿತ್ತು. ನಂತರ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಕಳಿಸಿದ್ದರು. ಈ ಸಂಬಂಧ ರಾಜ್ಯಪಾಲರು ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವರದಿ ಹೇಳಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದದ ಅರ್ಜಿಗೆ ಸಂಬಂಧಿಸಿದಂತೆ ತಕ್ಷಣ ನೋಟಿಸ್ ಜಾರಿಗೊಳಿಸಿದ ರಾಜ್ಯಪಾಲರು, ಕುಮಾರಸ್ವಾಮಿ ವಿಚಾರದಲ್ಲಿ ಏಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ? ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ, ಕುಮಾರಸ್ವಾಮಿಯವರು ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಖಾತೆ ಸಚಿವರಾಗಿದ್ದಾರೆ.
ಕೃಪೆ : ಈದಿನ.ಕಾಮ್
ಇದನ್ನೂ ಓದಿ : ವಿನೇಶಾ ಪ್ರತಿಭಟನೆ ಸ್ವೀಕರಿಸಿದ ‘ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ’; ಒಲಿಂಪಿಕ್ ಬೆಳ್ಳಿ ಪದಕದ ಆಸೆ ಜೀವಂತ