ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದಲೇ ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.
ಕೆ. ಗೋವಿಂದರಾಜ್ ಅವರು ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗಲೂ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದರು.
ಅಲ್ಲದೆ, 2023ರಿಂದ 2027ರವರೆಗೆ ದಕ್ಷಿಣಾ ಏಷ್ಯಾ ಬಾಸ್ಕೇಟ್ ಬಾಲ್ ಅಸೋಸಿಯೇಷನ್‌ನ ನಾಮನಿರ್ದೇಶಿತರಾಗಿ FIBA ಎಷ್ಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಗೋವಿಂದರಾಜ್ ಅವರು 2023ರಿಂದ 2024ರವರೆಗೆ ಭಾರತೀಯ ಬಾಸ್ಕೇಟ್‌ಬಾಲ್ ಫೆಡರೇಶನ್‌ನ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ಗೆ ಅವರು ಕ್ರೀಡಾ ಆಡಳಿತಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಬಾಸ್ಕೇಟ್‌ಬಾಲ್ ಅಸೋಸಿಯೇಷನ್‌ನ ಕಾರ್ಯದರ್ಶಿ ಮತ್ತು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಸದಸ್ಯರೂ ಆಗಿದ್ದರು.
ಆರ್‌ಸಿಬಿ ಗೆಲ್ಲುತ್ತಿದ್ದಂತೆ ಸರ್ಕಾರದಿಂದ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದು ಗೋವಿಂದರಾಜ್ ಅವರೇ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆದಿಯಾಗಿ ವಿಪಕ್ಷ ನಾಯಕರು ಆರೋಪಿಸಿದ್ದರು.
ಲಕ್ಷಾಂತರ ಜನರು ಸೇರುವ ಬಗ್ಗೆ ಮಾಹಿತಿ ನೀಡುವಲ್ಲಿ ಗುಪ್ತಚರ ಇಲಾಖೆಯು ವಿಫಲವಾಗಿತ್ತು ಎಂದೂ ವಿರೋಧಪಕ್ಷಗಳು ಆರೋಪಿಸಿದ್ದವು. ಈ ಕಾರಣಕ್ಕೆ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.