ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ.
ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠ ಈ ಆದೇಶ ನೀಡಿದೆ ಎಂದು ವರದಿ ತಿಳಿಸಿದೆ.
ಅರ್ಜಿದಾರ ಮುನಿರಾಜು ಅವರನ್ನು ಜಯಶಾಲಿಯನ್ನಾಗಿ ಘೋಷಿಸಲು ನ್ಯಾಯಾಲಯ ನಿರಾಕರಿಸಿದೆ. ತನ್ನ ಆದೇಶವನ್ನು ಚುನಾವಣಾ ಆಯೋಗ ಮತ್ತು ವಿಧಾನಸಭೆ ಕಾರ್ಯದರ್ಶಿಗೆ ರವಾನಿಸಲು ಸೂಚಿಸಿದೆ ಎಂದು ವರದಿ ಉಲ್ಲೇಖಿಸಿದೆ.
ಸುಬ್ಬಾರೆಡ್ಡಿ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಅನ್ನು ಕೋರಿದ್ದರು. ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ ನ್ಯಾಯಪೀಠ ಸುಬ್ಬಾರೆಡ್ಡಿ ಪರ ವಕೀಲರ ಮನವಿಯನ್ನು ತಿರಸ್ಕರಿಸಿತು ಎಂದು ವರದಿ ವಿವರಿಸಿದೆ.
ಪ್ರಕರಣದ ಹಿನ್ನೆಲೆ : ಸುಬ್ಬಾರೆಡ್ಡಿ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಆಸ್ತಿ ಘೋಷಣೆ ವೇಳೆ ಮಾಹಿತಿಯನ್ನು ಮರೆಮಾಚುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದು ಚುನಾವಣಾ ಅಕ್ರಮವಾಗಿದೆ. ಹಾಗಾಗಿ, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಮತ್ತು ಎರಡನೇ ಸ್ಥಾನ ಗಳಿಸಿರುವ ತನ್ನನ್ನು ಜಯಶಾಲಿ ಎಂದು ಘೋಷಿಸುವಂತೆ ಸಿ.ಮುನಿರಾಜು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.
Coutresy : barandbench.com


