PC:[email protected] of Karnataka

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣ, ಆಂಧ್ರಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಮಹಾರಾಷ್ಟ್ರದಲ್ಲಿ ನದಿಗಳು ತುಂಬಿದ್ದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜಲಾಶಯಗಳಿಂದ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ನದಿ ಪಾತ್ರದ ಜನರು ತೀರ ಸಂಕಷ್ಟಕ್ಕೆ ಈಡಾಗಿದ್ದಾರೆ. ಪ್ರಮುಖ ಸೇತುವೆಗಳು ಜಲಾವೃತವಾಗಿವೆ. ಇಲ್ಲಿಯವರೆಗೆ ರಾಜ್ಯದಲ್ಲಿ ಮಹಾಮಳೆಗೆ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ್, ಕೊಪ್ಪಳ್, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳು ಪ್ರವಾಹದಿಂದಾಗಿ ಹೆಚ್ಚು ಹಾನಿಗೊಳಗಾಗಿವೆ. ಎಲ್ಲಾ ಪ್ರಮುಖ ಅಣೆಕಟ್ಟುಗಳಿಂದ ನೀರು ಹೊರ ಬೀಡಲಾಗುತ್ತಿರವ ಕಾರಣ ಹಳ್ಳಿಗಳಲ್ಲಿ ನೀರು ತುಂಬಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಇದನ್ನೂ ಓದಿ: ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ರಾಜ್ಯದಲ್ಲಿ ಮಳೆಯಿಂದ ಕಷ್ಟಕ್ಕೆ ಈಡಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು  ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ-2, ಯಾದಗಿರಿಯಲ್ಲಿ-2 ಮತ್ತು ರಾಯಚೂರಿನಲ್ಲಿ-1 NDRF ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್​ ಮೂಲಕ ಚರ್ಚೆ ನಡೆಸಿದರು.

ವಿಡಿಯೋ ಕಾನ್ಫರೆನ್ಸ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, ’ಮಳೆ ಹಾನಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ’ ಅಂತಾ ಹೇಳಿದರು.

‘ರಾಜ್ಯದ ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು  ಭರವಸೆ ನೀಡುತ್ತೇನೆ.  ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಆರ್​.ಅಶೋಕ್ ಭೇಟಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದೇನೆ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಪರಿಹಾರ ಸಿಗುವ ಭರವಸೆ ಇದೆ’ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಕಳೆದ 5 ದಿನಗಳಲ್ಲಿ ಸುರಿದ ಮಳೆಗೆ 2,576 ಮನೆಗಳು ಹಾನಿಗೊಳಗಾಗಿವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸಭೆ ನಡೆಸಿ, ಮಳೆಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.


ಇದನ್ನೂ ಓದಿ: ತೆಲಂಗಾಣ, ಆಂಧ್ರದಲ್ಲಿ ಭಾರಿ ಮಳೆ: ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ ದುರ್ಮರಣ

LEAVE A REPLY

Please enter your comment!
Please enter your name here