ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಲೇವಾರಿ ಮಾಡಿದೆ.
ಸೊರೇನ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರ ಬಂಧನವನ್ನು ಅಕ್ರಮ ಎಂದು ಸಲ್ಲಿಕೆಯಾಗಿರುವ ಅರ್ಜಿಯನ್ನು ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕನನ್ನು ಜನವರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಿತ್ತು. ಇಡಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಸೊರೇನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಗೆ ಮೇ 13 ರಂದು ಮತದಾನ ಆರಂಭವಾಗಲಿದ್ದು, ಜೆಎಂಎಂ ನಾಯಕನಿಗೆ ಪ್ರಚಾರ ಮಾಡಲು ಅವಕಾಶ ನೀಡಬೇಕು ಎಂದು ಹೇಳಿದರು.
“ಜನವರಿ 31 ರಂದು ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಯಿತು. ನಾವು ಫೆಬ್ರವರಿ 4 ರಂದು ಹೈಕೋರ್ಟ್‌ಗೆ ತೆರಳಿದ್ದೇವೆ. ಹೈಕೋರ್ಟ್ ಫೆಬ್ರವರಿ 28 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಆದರೆ, ತೀರ್ಪನ್ನು ನೀಡಲಿಲ್ಲ. ಹೈಕೋರ್ಟ್ ತೀರ್ಪನ್ನು ದೀರ್ಘಕಾಲದವರೆಗೆ ಬಾಕಿ ಇರಿಸಿದೆ” ಎಂದು ಸಿಬಲ್ ಸುಪ್ರೀಂಕೋರ್ಟ್ ಗಮನಕ್ಕೆ ತಂದರು.
ಮೇ 13 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಸಂವಿಧಾನದ 32ನೇ ಪರಿಚ್ಛೇದದ ಅಡಿಯಲ್ಲಿ ನಾವು ಈ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೇವೆ ಮತ್ತು ಕಳೆದ ವಾರ ನೋಟಿಸ್ ಜಾರಿ ಮಾಡಲಾಗಿತ್ತು. ನೋಟಿಸ್ ನೀಡಿದ ನಂತರ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿ ತೀರ್ಪು ನೀಡಿದೆ. ಈ ರೀತಿಯಲ್ಲಿ ಹಕ್ಕುಗಳನ್ನು ತುಳಿಯುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸಿಬಲ್ ಹೇಳಿದ್ದಾರೆ.
ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಜನವರಿ 31 ರಂದು ಬಂಧಿಸಲಾಯಿತು. ಪ್ರಸ್ತುತ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ; ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು


