Homeಕರ್ನಾಟಕಕಾಂಗ್ರೆಸ್‌ ಪಕ್ಷದ ಕಟ್ಟಾಳು ಡಿಕೆ ಶಿವಕುಮಾರ್‌ ಅವರ ರಾಜಕೀಯ ಜೀವನದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ..

ಕಾಂಗ್ರೆಸ್‌ ಪಕ್ಷದ ಕಟ್ಟಾಳು ಡಿಕೆ ಶಿವಕುಮಾರ್‌ ಅವರ ರಾಜಕೀಯ ಜೀವನದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ..

- Advertisement -
- Advertisement -

2023ರ ವಿಧಾನಸಭೆಯ ರುವಾರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇದೀಗ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಏಳುಬೀಳುಗಳಲ್ಲಿ ಬಂಡೆಯಂತೆ ಪಕ್ಷದ ಜೊತೆ ನಿಂತಿದ್ದಾರೆ. ಪಕ್ಷ ಸಂಘಟನೆಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ.

ವೈಯಕ್ತಿಕ ಜೀವನದಲ್ಲಿ ಪ್ರಗತಿಪರ ರೈತರಾಗಿ, ವಸತಿ ಯೋಜನೆಗಳ ನಿರ್ಮಾತೃರಾಗಿರುವ ಡಿ.ಕೆ. ಶಿವಕುಮಾರ್, ನ್ಯಾಷನಲ್ ಎಜುಕೇಶನ್ ಫೌಂಡೇಷನ್‍ನ ಸ್ಥಾಪಕ ಅಧ್ಯಕ್ಷರಾಗಿ ಇಂಜಿನಿಯರಿಂಗ್, ನರ್ಸಿಂಗ್ ಹಾಗೂ ಮ್ಯಾನೇಜ್‍ಮೆಂಟ್ ವಿದ್ಯಾಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಲ್ಲದೆ ವಿಶ್ವಮಟ್ಟದ ಎರಡು ಪ್ರಾಥಮಿಕ ಶಾಲೆಗಳನ್ನು ನಡೆಸುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು.

1985ರ ಸಾತನೂರು ವಿಧಾನಸಭಾಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾದ ಶ್ರೀ ಹೆಚ್.ಡಿ. ದೇವೇಗೌಡ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷವು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿತ್ತು. ಆದರೆ ಹೆಚ್.ಡಿ. ದೇವೇಗೌಡ ಅವರ ವಿರುದ್ದ ಸಾಕಷ್ಟು ಪ್ರಬಲ ಪ್ರತಿರೋಧವನ್ನೇ ತೋರಿದರೂ ಅಂತಿಮವಾಗಿ ಡಿ.ಕೆ. ಶಿವಕುಮಾರ್ ಸೋಲಿಗೆ ಶರಣಾದರು.

1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು.

1989ರಲ್ಲಿ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಸಿ ಅಭೂತಪೂರ್ವ ಜಯಗಳಿಸಿದರು. 1991ರಲ್ಲಿ ಬಂಧಿಖಾನೆ ಖಾತೆ ಸಚಿವರಾದರು.

ಕಾಂಗ್ರೆಸ್ ಪಕ್ಷದಲ್ಲಿದ್ದ ಹಲವು ವಿರೋಧಿಗಳ ರಾಜಕೀಯ ಪಿತೂರಿಯಿಂದಾಗಿ 1994ರಲ್ಲಿ ಪಕ್ಷದ ಟಿಕೆಟ್ ಕಯತಪ್ಪಿತು ಈ ವೇಳೆ ಧೃತಿಗೆಡದೆ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು.

2004ರಲ್ಲಿ ಡಿ.ಕೆ. ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರೂ ಕೂಡ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು.

2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ದ ರಾಜಕೀಯವಾಗಿ, ಸಾರ್ವಜನಿಕವಾಗಿ ಅಷ್ಟೇನು ಪರಿಚಿತರಲ್ಲದ ಅಜ್ಞಾತ ಹೆಣ್ಣು ತೇಜಸ್ವಿನಿಗೌಡರವರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಡಿಕೆ ಶಿವಕುಮಾರ್ ಅವರು ಸೇಡು ತೀರಿಸಿಕೊಂಡರು.

ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ವಿಲಾಸ್‍ರಾವ್ ದೇಶ್‍ಮುಖ್ ಸಮ್ಮಿಶ್ರ ಸರ್ಕಾರ ncp ಪಕ್ಷದೊಂದಿಗೆ ಸೆಣಸಾಟಕ್ಕಿಳಿದಾಗ ಸರ್ಕಾರ ಅಲ್ಪಮತದ ಅಪಾಯಕ್ಕೆ ಸಿಕ್ಕಿಕೊಂಡಿತ್ತು. ಆಗ ncp ಮತ್ತು ವಿರೋಧ ಪಕ್ಷಗಳು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಇಳಿದಿದ್ದವು. ತಕ್ಷಣ ಕಾಂಗ್ರೆಸ್ ಹೈಕಮಾಂಡಿನ ಆದೇಶದಂತೆ ಕಾರ್ಯಪ್ರವೃತ್ತರಾದ ಡಿ.ಕೆ. ಶಿವಕುಮಾರ್ ರವರು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಮುಂಬೈಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಸುಮಾರು 10-12 ದಿನಗಳ ಕಾಲ ಬೆಂಗಳೂರಿನ ವೈಭವಪೇತ ರೆಸಾರ್ಟ್‍ಒಂದರಲ್ಲಿ ಇರಿಸಿಕೊಂಡು ರಕ್ಷಣೆ ನೀಡಿದರು.

1999ರಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಗೊಂಡಾಗ ಡಿ.ಕೆ. ಶಿವಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಂತು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ರೀತಿಯಲ್ಲಿ ಜಯಗಳಿಸಿ ಸರ್ಕಾರ ರಚಿಸುವಲ್ಲಿ ಕಾರಣೀಭೂತರಾದರು.

ಎಸ್.ಎಂ. ಕೃಷ್ಣ ಚುನಾವಣಾ ಪೂರ್ವದಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು. ಡಿ.ಕೆ. ಶಿವಕುಮಾರ್, ಇದರಿಂದಲೇ ಕಾಂಗ್ರೆಸ್ ಪಕ್ಷ 139 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸುವಂತಾಯಿತು.

1999ರಲ್ಲಿ ಡಿ.ಕೆ. ಶಿವಕುಮಾರ್ ಅವರು ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ, ಅವರ ಎದುರಾಳಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸೋಲಿಸುವ ಮೂಲಕ ಸತತ 3ನೇ ಬಾರಿಗೆ ಮರಳಿ ಗೆಲುವು ಸಾಧಿಸಲು ಸಾಧ್ಯವಾಯಿತು. ಸಹಕಾರ ಖಾತೆ ಸಚಿವರಾದರು(1999-2002).

2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಆರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಸ್ಥಾನ ತಪ್ಪಿತು.  ಏಳೇ ತಿಂಗಳ ಅಲ್ಪಅವಧಿಯ ನಂತರ ಡಿ.ಕೆ. ಶಿವಕುಮಾರ್ ಶ್ರೀ ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡರು. ಇಂಧನ ಖಾತೆಯಂತಹ ಪ್ರಮುಖ ಖಾತೆಯನ್ನುಅವರಿಗೆ ನೀಡಲಾಯಿತು.

2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೊದಲಿಗೆ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ಡಿ.ಕೆ.ಶಿವಕುಮಾರ್‌ ನಿರ್ವಹಿಸಿದರು.

ಮೈತ್ರಿ ಸರ್ಕಾರದ ಉಳಿವಿಗೆ ಟೊಂಕ ಕಟ್ಟಿ ನಿಂತಿದ್ದ ಶಿವಕುಮಾರ್ ಅವರು ಪಕ್ಷದ ನಾಯಕತ್ವ ತಮಗೆ ಜವಬ್ದಾರಿ ವಹಿಸಿದ ಅನೇಕ ಉಪಚುನಾವಣೆಗಳಲ್ಲಿ ಪಕ್ಷ ಗೆಲುವಂತೆ ನೋಡಿಕೊಂಡಿರು.

4 ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೇನಾನಿಯಾಗಿ ಕಾರ್ಯ ನಿರ್ವಹಿಸಿರುವ ಡಿ.ಕೆ.ಶಿವಕುಮಾರ್ ಅವರು ಯಾವುದೇ ಸಂದರ್ಭದಲ್ಲೂ ಯಾವುದೇ ಆಮಿಷಗಳಿಗೂ ಬಲಿಯಾಗದೇ ಪಕ್ಷ ನಿಷ್ಠೆಯನ್ನು ಬದಲಿಸಲಿಲ್ಲ.

2017ರಲ್ಲಿ ಹೈಕಮಾಂಡ್ ವಹಿಸಿದ ಜವಬ್ದಾರಿಯ ಮೇರೆಗೆ ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಟ್ಟುಕೊಂಡ ಅವರು ಅದಕ್ಕಾಗಿ ಭಾರಿ ಬೆಲೆಯನ್ನೇ ತೆರಬೇಕಾಯಿತಾದರೂ ವಿಚಲಿತರಾಗಲಿಲ್ಲ. ಅವರ ಪರಿವಾರದ ಮೇಲೆ ದಾಳಿ ನಡೆಸಿದಲ್ಲದೇ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೂ ಅಟ್ಟಿದರು. ಈ ಸಂದರ್ಭದಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಜೈಲಿಗೆ ಭೇಟಿ ಕೊಟ್ಟು ಡಿ.ಕೆ. ಶಿವಕುಮಾರ್ ಅವರಿಗೆ ಸಾಂತ್ವನ ಹೇಳಿದ್ದು, ಅವರ ಪಕ್ಷ ನಿಷ್ಠೆಗೆ ಸಿಕ್ಕ ಗೌರವಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಅಹಿಂದ ನಾಯಕ, ಸಮಾಜವಾದಿ ಸಿದ್ದರಾಮಯ್ಯರ ರಾಜಕೀಯ ಪಯಣದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ..

ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆ:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ಮಾರ್ಚ್ 11, 2020ರಂದು ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಪಕ್ಷವನ್ನು ಸಂಘಟಿಸಿದ ರೀತಿ ಎಲ್ಲಾ ರಾಜಕೀಯ ನಾಯಕರಿಗೆ ಮಾದರಿಯಾಗಿ ಉಳಿದಿದೆ ಎಂದರೆ ತಪ್ಪಾಗುವುದಿಲ್ಲ.

ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಿಸಿದಾಗ, ಮತ್ತೆ ತಮ್ಮ ಕಾರ್ಯಕರ್ತರನ್ನು ಜನರತ್ತ ಕಳುಹಿಸಿ ರಾಜ್ಯದಲ್ಲಿ ಯಶಸ್ವಿಯಾಗಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡಿದರು. ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿ ಜಾರಿ ಹಾಗೂ ರಾಜ್ಯದಲ್ಲಿ 78 ಲಕ್ಷ ಸದಸ್ಯತ್ವ ನೋಂದಣಿ ಮೂಲಕ ದೇಶದಲ್ಲಿ ಪ್ರಥಮ ಸ್ಥಾನ ಪಡೆದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದರು.

ಮೇಕೆದಾಟು ಯೋಜನೆಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದಾಗ ಈ ಯೋಜನೆ ಆಗ್ರಹಿಸಿ, ಈ ಭಾಗದಲ್ಲಿ 160 ಕಿ.ಮೀ ಪಾದಯಾತ್ರೆ ಮಾಡಿದರು.

ಕೇಂದ್ರ ಸರ್ಕಾರದ ಕೃಷಿ ಕರಾಳ ಕಾಯ್ದೆ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ರೈತರ ಬೆನ್ನಿಗೆ ನಿಂತರು. ಇನ್ನು ಬಿಜೆಪಿ ಸರ್ಕಾರದ ಭ್ರಷ್ಟಾಚಾರ, 40% ಕಮಿಷನ್, ಪೇ ಸಿಎಂ, ನೇಮಕಾತಿ ಅಕ್ರಮ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಆಮೂಲಕ ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಿ ರೂಪುಗೊಂಡರು.

75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ ಅಭೂತಪೂರ್ವ ಕಾರ್ಯಕ್ರಮ ಆಯೋಜನೆ ಮಾಡಿ ಸರ್ಕಾರಕ್ಕಿಂತ ಅದ್ಭುತ ಹಾಗೂ ವಿಶೇಷವಾಗಿ ಸ್ವಾತಂತ್ರ್ಯ ದಿನ ಆಚರಣೆ ಮಾಡಿದರು.

ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಆರಂಭಿಸಿದ ನಂತರ ಕರ್ನಾಟಕದಲ್ಲಿ 21 ದಿನಗಳ ಕಾಲ 550 ಕಿ.ಮೀ ಉದ್ದದ ಭಾರತ ಜೋಡೋ ಯಾತ್ರೆ ಯಶಸ್ವಿ ಆಯೋಜನೆ ಮಾಡಿದರು.

ಪ್ರಜಾಧ್ವನಿ ಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಎಲ್ಲ ವರ್ಗಗಳ ಜನರ ಸಂಕಷ್ಟ ಆಲಿಸಿದರು. ಅವುಗಳಿಗೆ ಪರಿಹಾರ ಕಂಡುಕೊಳ್ಳು ಯೋಜನೆಗಳನ್ನು ರೂಪಿಸಲು ನೆರವಾದರು.

ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡಿ ಮಹಿಳೆಯರನ್ನು ಕಾಂಗ್ರೆಸ್ ಪಕ್ಷದ ಕಡೆ ಸೆಳೆಯುವಲ್ಲಿ ಯಶಸ್ವಿಯಾದರು.

ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆಲ್ಲಾ ಸಂಘಟನೆ ಮಾಡಿ ಪಕ್ಷಕ್ಕೆ ಶಕ್ತಿ ತುಂಬಬಹುದೋ ಆ ಎಲ್ಲಾ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಪಕ್ಷವನ್ನು ಮುನ್ನಡೆಸಿದರು.

ಕಾಂಗ್ರೆಸ್‌ ಪಕ್ಷದ ಕಟ್ಟಾಳುವಾಗಿ ಪಕ್ಷದ ಗೆಲುವಿಗೆ ಹೇಗೆಲ್ಲಾ ಕೆಲಸ ಮಾಡಬೇಕೋ ಹಗಲು ರಾತ್ರಿಯನ್ನದೇ ಪಕ್ಷಕ್ಕಾಗಿ ದುಡಿದರು. ಅದರ ಫಲವಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯಿತು. ಇವರ ಸಂಘಟನಾ ಚಾತುರ್ಯದ ಜೊತೆಗೆ ಸಿದ್ದರಾಮಯ್ಯನವರ ವರ್ಚಸ್ಸು ಮತ್ತು ಅವರ ಅಹಿಂದ ಅಜೆಂಡಾದ ಫಲವಾಗಿ ರಾಜ್ಯದಲ್ಲಿ 136 ಸ್ಥಾನಗಳು ಬರಲು ಸಾಧ್ಯವಾಯಿತು. ಸಧ್ಯ ಅವರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಒಲಿದುಬಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...