‘ಭಾರತೀಯ ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
‘ನ್ಯಾಯಮೂರ್ತಿ ಸೂರ್ಯ ಕಾಂತ್ ಮುಂದಾಳತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಹಾಗೂ ದೇಶದ ಕಾನೂನಿನ ಬಗ್ಗೆ ಜನರಲ್ಲಿ ಇರುವ ನಂಬಿಕೆ ಮತ್ತಷ್ಟು ಗಟ್ಟಿಗೊಳ್ಳುವ ನಂಬಿಕೆಯಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.
‘ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೂರ್ಯ ಕಾಂತ್ ಅವರಿಗೆ ನನ್ನ ಅಭಿನಂದನೆಗಳು. ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ಅವರ 14 ತಿಂಗಳ ಅಧಿಕಾರವಧಿಯು ಆರಂಭವಾಗುತ್ತದೆ’ ಎಂದು ಖರ್ಗೆ ಹೇಳಿದ್ದಾರೆ.
‘ನ್ಯಾಯಾಂಗದ ಮೇಲೆ ಜನರಿಗೆ ಇರುವ ನಂಬಿಕೆಯು ಮುಂದುವರಿಯುತ್ತದೆ ಎಂಬ ನಂಬಿಕೆ ನನಗಿದೆ’ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.


