Homeರಾಜಕೀಯದಾಸ್ ಕ್ಯಾಪಿಟಲ್‍ನ ಚಾರಿತ್ರಿಕ ಮಹತ್ವ

ದಾಸ್ ಕ್ಯಾಪಿಟಲ್‍ನ ಚಾರಿತ್ರಿಕ ಮಹತ್ವ

- Advertisement -
- Advertisement -

 

ಕಾರ್ಲ್‍ಮಾಕ್ರ್ಸ್‍ರ ದಾಸ್‍ಕ್ಯಾಪಿಟಲ್ ಮಹತ್ವದ ಕೃತಿಯಾಗಿದ್ದು ಇಂಗ್ಲೀಷಿನಲ್ಲಿ `ಕ್ಯಾಪಿಟಲ್’ ಎಂಬ ಹೆಸರಿನಲ್ಲಿ ಪ್ರಕಟವಾಗಿದೆ. ಕ್ಯಾಪಿಟಲ್‍ನಲ್ಲಿ ರಾಜಕೀಯ ಸಂಗತಿಗಳು ಮತ್ತು ಆರ್ಥಿಕ ಸಿದ್ಧಾಂತಗಳು ಮಾತ್ರವೇ ಇಲ್ಲ. ಮನುಷ್ಯನ ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನೂ ವಿವರಿಸಲಾಗಿದೆ. ಯುರೋಪಿನ ಅಭಿಜಾತ ಆರ್ಥಿಕ ತಜ್ಞರ ಚಿಂತನೆಗಳನ್ನು ಮತ್ತು ಅವರ ಸಾಂಪ್ರದಾಯಿಕ ಆರ್ಥಿಕ ಚಿಂತನೆಗಳನ್ನು ಮಾಕ್ರ್ಸ್ ಇಲ್ಲಿ ಮುಖಾಮುಖಿ ಮಾಡುತ್ತಾರೆ. ಇಂತಹ ಆರ್ಥಿಕ ತಜ್ಞರಲ್ಲಿ ಆಡಂಸ್ಮಿತ್ ಕೂಡಾ ಒಬ್ಬ. ಅವನು ತನ್ನ ಕೃತಿಗಳಲ್ಲಿ ಮುಕ್ತ ಮಾರುಕಟ್ಟೆ ಮತ್ತು ವಿನಿಮಯ ಪದ್ಧತಿಯನ್ನು ವಿವರವಾಗಿ ಚರ್ಚಿಸಿದ್ದಾನೆ. ಅದರಲ್ಲಿ ಅವನು ಪ್ರತಿಪಾದಿಸಿದ ಬಹಳ ಮುಖ್ಯವಾದ ಅಂಶವೆಂದರೆ, ಮನುಷ್ಯರು ಮೂಲತಃ ಸ್ಪರ್ಧಾತ್ಮಕ ಮನೋಭಾವವುಳ್ಳವರು, ಅವರು ಸ್ವಲಾಭವನ್ನು ಮಾತ್ರ ಗಣಿಸುತ್ತಾರೆ ಎನ್ನುತ್ತಾನೆ. ಸ್ಮಿತ್ ಸಿದ್ಧಾಂತದಲ್ಲಿ ಬಹಳ ಮುಖ್ಯವಾದ ಅಂಶವೆಂದರೆ ಸ್ವಲಾಭ ಮತ್ತು ಆರ್ಥಿಕ ಕ್ರೋಢೀಕರಣದ ಅಂಶ. ಬಂಡವಾಳವಾದದ ಸಮರ್ಥನೆಯು ಅವನ ಗುರಿ. ಆದರೆ ಮಾಕ್ರ್ಸ್ ಹೇಳುವ ಬಂಡವಾಳವಾದವು ಬೇರೆ. ಇದು ಅವನ ಸೂಕ್ಷ್ಮ ಗ್ರಹಿಕೆಯ ಫಲವಾಗಿದೆ. ಸಮಾಜ ಮತ್ತು ಆರ್ಥಿಕತೆಯು ಪರಸ್ಪರ ಹೇಗೆ ಜೊತೆಯಲ್ಲಿ ಸಾಗುತ್ತವೆ ಎನ್ನುವುದನ್ನು ಈ ಕೃತಿಯಲ್ಲಿ ಚರ್ಚೆ ಮಾಡಲಾಗಿದೆ. ಸಮುದಾಯ ಮತ್ತು ಹಣ ಎನ್ನುವುದರ ದ್ವಂದ್ವಾತ್ಮಕತೆಯು ಹೇಗೆ ಕೆಲಸ ಮಾಡುತ್ತದೆ ಎನ್ನುವುದನ್ನು ಮಾಕ್ರ್ಸ್ ವಿವರಿಸುತ್ತಾನೆ. ಅವನು ಚರ್ಚೆಯನ್ನು ಪ್ರಾರಂಭ ಮಾಡುವುದು ವಸ್ತು ಮತ್ತು ಹಣದ ಮೂಲಕ. ವಸ್ತು ಎನ್ನುವುದು ಮಾಕ್ರ್ಸ್‍ಗೆ ಒಂದು ಅಲೌಕಿಕವಾದ ಅಥವಾ ಆಧ್ಯಾತ್ಮಿಕವಾದ ಸಂಗತಿ ಅಲ್ಲ. ಯಾವುದನ್ನು ನಾವು ವಸ್ತು ಎಂದು ಕರೆಯುತ್ತೇವೆಯೋ ಅದು ನಮಗೆ ಹೊರಗಿನದು. ಅದು ಒಳಗಿನದಲ್ಲ ಎನ್ನುತ್ತಾನೆ. ಸರಕು ಎನ್ನುವುದು ನಮ್ಮ ಬಯಕೆಯನ್ನು ಪೂರೈಸುತ್ತದೆ. ನಮ್ಮಲ್ಲಿ ಬಯಕೆಗಳನ್ನು ಉದ್ದೀಪಿಸುವುದು ಈ ವಸ್ತುಗಳೆ. ಚರಿತ್ರೆಯಲ್ಲಿ ವಸ್ತುಗಳು ಉತ್ಪಾದಿತವಾಗಿವೆ. ಭೌತಿಕ ಸಂಗತಿಗಳು ಮತ್ತು ಭೌತಿಕ ಉತ್ಪಾದನೆಗಳಿಂದಲೇ ಸಾಂಸ್ಕøತಿಕ ಭೌತವಾದವು ಹುಟ್ಟಿಕೊಳ್ಳುತ್ತದೆ. ಉತ್ಪಾದನೆಯನ್ನು, ಕಾರ್ಮಿಕರು ಮತ್ತು ಅವರ ಶಕ್ತಿಯೆಂದು ಮಾಕ್ರ್ಸ್ ಕರೆಯುತ್ತಾನೆ. ಸಂಸ್ಕøತಿಯಲ್ಲಿ ಮತ್ತು ಧರ್ಮದಲ್ಲಿ ನಾವು ಮನುಷ್ಯರನ್ನು ಅಮೂರ್ತರನ್ನಾಗಿ ವಿವರಿಸುತ್ತೇವೆ. ಆದರೆ ವಸ್ತು ಸ್ಥಿತಿಯು ಹಾಗಿಲ್ಲ. ಚಾರಿತ್ರಿಕ ಭೌತವಾದವನ್ನು ಚರ್ಚಿಸುವಾಗ ಮಾಕ್ರ್ಸ್, ಆದರ್ಶ ಮತ್ತು ಭೌತಿಕ ಸಂಗತಿಗಳನ್ನು ಚರ್ಚಿಸಿರುವುದು ಗಮನಾರ್ಹ. ಹಣವನ್ನು ಕುರಿತು ಹೇಳುವಾಗ ಮಾಕ್ರ್ಸ್ `ವಸ್ತು ಮತ್ತು ಅದರ ಮೌಲ್ಯವನ್ನು ನಾವು ನಿರ್ಧರಿಸುವಾಗ ನಮ್ಮ ಅಳತೆಗೆ ಅದು ಸಿಗಬೇಕಾಗುತ್ತದೆ. ಆದ್ದರಿಂದಲೇ ಹಣವು ಮುಖ್ಯವಾಗುತ್ತದೆ’ ಎನ್ನುತ್ತಾನೆ. ಮಾಕ್ರ್ಸ್‍ವಾದದ ಪ್ರಕಾರ ವಾಸ್ತವದಿಂದಲೇ ಆದರ್ಶವು ಹುಟ್ಟಿಕೊಳ್ಳುತ್ತದೆ. ಅನೇಕರು ಭಾವಿಸಿಕೊಂಡಂತೆ ಸಂಸ್ಕøತಿಯು ಸ್ವತಂತ್ರವಾಗಿಯೇ ತನ್ನ ಅಸ್ತಿತ್ವವನ್ನು ಪಡೆದುಕೊಂಡಿರುವುದಿಲ್ಲ. ಹಾಗೆಯೇ ನಾವು ಕಟ್ಟಿಕೊಂಡಿರುವ ನಮ್ಮ ಆದರ್ಶಗಳು ಕೂಡಾ. ನಾವು ಯಾವುದನ್ನು ಸಂಸ್ಕøತಿಯೆಂದು ಕರೆಯುತ್ತಿದ್ದೇವೆಯೋ ಅದು ಭೌತಿಕ ಜಗತ್ತಿಗೆ ಸಂಬಂಧಪಟ್ಟದ್ದು. ಆದುದರಿಂದ ಮನುಷ್ಯನ ಸ್ವಭಾವವನ್ನು ಕೇವಲ ಸಂಸ್ಕøತಿಯ ಮೂಲಕವೇ ಅರ್ಥ ಮಾಡಿಕೊಳ್ಳಲು ಬರುವುದಿಲ್ಲ. ಮಾಕ್ರ್ಸ್‍ನ ಬಂಡವಾಳ ಕೃತಿಯು ಹೊಸ ರಾಜಕೀಯ ತಾತ್ವಿಕತೆಯನ್ನು ರೂಪಿಸಿದೆ. ಅದು ಮನಷ್ಯನ ಬದುಕಿನ ತಾತ್ವಿಕ ವಿವೇಚನೆಯೇ ಆಗಿದೆ.
ಯಾವುದನ್ನು ಆರ್ಥಿಕತೆಯೆಂದು ಹೇಳುತ್ತೇವೆಯೋ ಅದು ಮೂಲತಃ ಸಾಮಾಜಿಕವಾದ ಅರ್ಥವನ್ನು ಹೊಂದಿರುತ್ತದೆ. ಆದ್ದರಿಂದ ಅದನ್ನು ಸಾಮಾಜಿಕ ಜೀವನದಿಂದ ಬೇರೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ಮಾಕ್ರ್ಸ್. ಆದ್ದರಿಂದ ಅವನು ತನ್ನ ವಾದವನ್ನು ಮಂಡಿಸುವಾಗ ಅದನ್ನು ರಾಜಕಾರಣ, ಸಮಾಜ, ಆರ್ಥಿಕತೆಗಳ ಮೂಲಕವೇ ಮಂಡಿಸುತ್ತಾನೆ. ಉತ್ಪಾದನೆ ಮತ್ತು ಪುನರುತ್ಪಾದನೆ ಎನ್ನುವುದು ನಿರಂತರವಾದ ಒಂದು ಪ್ರಕ್ರಿಯೆ. ಅದನ್ನು ನಾವು ಒರೆಸಿ ಹಾಕಲು ಬರುವುದೂ ಇಲ್ಲ ಎನ್ನುತ್ತಾರೆ.


ಬಂಡವಾಳವಾದ ತನ್ನ ಹಿಂದಿನ ಮಾರುಕಟ್ಟೆಗೆ ಹೋಲಿಸಿದಾಗ ತುಂಬಾ ಪ್ರಗತಿಪರವೆಂದು ಅನಿಸಿತು. ಬಂಡವಾಳವಾದವು ಸಾಮಾಜಿಕವಾಗಿಯೂ ಬಹಳ ದೊಡ್ಡ ಬದಲಾವಣೆಯನ್ನು ತಂದಿತು. ಬಂಡವಾಳವಾದದ ಪ್ರಮುಖ ನಿಲುವೆಂದರೆ, ವ್ಯಕ್ತಿಯ ಸಂಪನ್ಮೂಲವು ಹೆಚ್ಚಿದಂತೆ ಅವನು ಹೆಚ್ಚು ನೆಮ್ಮದಿಯಿಂದ ಇರಬಲ್ಲ. ಈ ದೃಷ್ಟಿಯಿಂದ ಅದರ ಮಾರುಕಟ್ಟೆಯ ಸಿದ್ಧಾಂತಗಳು ಬೇರೆ. ಉತ್ತಮ ಆರ್ಥಿಕತೆಯು ಮನುಷ್ಯರಿಗೆ ಹೆಚ್ಚು ಅಗತ್ಯವೆಂದು ಅದು ಪ್ರತಿಪಾದಿಸಿತು. ಬಂಡವಾಳವಾದವು ಮತ್ತೊಂದು ಅಂಶವನ್ನು ಸೂಚಿಸುತ್ತದೆ. ಅದಕ್ಕೆ ಯಾವುದೇ ರಾಜಕೀಯ ಸಿದ್ಧಾಂತಗಳೂ ಮುಖ್ಯವಲ್ಲ. ಲಾಭವನ್ನು ಮಾತ್ರವೇ ಅದು ಕೇಂದ್ರೀಕರಿಸುತ್ತದೆ. ಬಂಡವಾಳಶಾಹಿ ಜಗತ್ತಿಗೆ ಯಾವುದೇ ರಾಜಕೀಯ ಸಿದ್ಧಾಂತಗಳು ಇರುವುದಿಲ್ಲ. ಈ ದೃಷ್ಟಿಯಿಂದ ಅದರ ರಾಜಕೀಯ ಇತಿಹಾಸವನ್ನು ಸುಲಭವಾಗಿ ಗುರುತಿಸಲು ಬರುವುದೂ ಇಲ್ಲ. ನವಬಂಡವಾಳವಾದವು ವಾಸ್ತವವಾಗಿ ನಿರೂಪಿಸುವ ಸಂಬಂಧಗಳ ಅರ್ಥವೂ ಬೇರೆಯಾಗಿದೆ. ಆಧುನಿಕ ಮಾರುಕಟ್ಟೆ ಮತ್ತು ಮನುಷ್ಯನ ಸಂಬಂಧವು ಸರಳವಾಗಿಲ್ಲ. ಹಾಗೆ ನೋಡಿದರೆ ಮಾರುಕಟ್ಟೆಯ ಸಿದ್ಧಾಂತಗಳಿಗೂ ರಾಜಕೀಯ ಸಂಘಟನೆಗಳಿಗೂ ನೇರ ಸಂಬಂಧವಿಲ್ಲ. ಅವುಗಳ ಚೌಕಟ್ಟುಗಳು ಭಿನ್ನವಾಗಿವೆ. ಬಂಡವಾಳವಾದವು ಹೇಳುವ ಅನೇಕ ಸಂಗತಿಗಳನ್ನು ನಾವು ಹೇಗೆ ನೋಡಬಹುದು ಎನ್ನುವುದೂ ಮುಖ್ಯವಾದ ಪ್ರಶ್ನೆಯಾಗಿದೆ. ಬಂಡವಾಳವಾದವು ಸುಖಕ್ಕೂ, ಹಣಕ್ಕೂ ಅದು ಸಂಬಂಧವನ್ನು ಕಲ್ಪಿಸಿದ್ದರಿಂದ ಅದರ ಮೂಲಕವೇ ಜಗತ್ತಿಗೆ ಒಂದು ವಿಶಿಷ್ಟವಾದ ರುಚಿಯನ್ನೂ ತೋರಿಸಿಕೊಟ್ಟಿತು. ಹಳೆಯ ಸಾಮಾಜಿಕ ಮತ್ತು ಆರ್ಥಿಕ ಪದ್ಧತಿಗೆ ಹೋಲಿಸಿದರೆ ಬಂಡವಾಳವಾದವು ಹೆಚ್ಚು ಕ್ರಾಂತಿಕಾರಕವಾಗಿ ಕಂಡಿದ್ದು ನಿಜ. ಹಾಗೆ ನೋಡುವುದಿದ್ದರೆ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡೇ ನಾವು ಇದನ್ನು ಪರಿಶೀಲಿಸಬಹುದು. ಆರ್ವಚೀನ ಸಮಾಜದಲ್ಲಿ ವ್ಯಕ್ತಿಯ ಸ್ಥಾನಮಾನಗಳು ಬೇರೆಯಿದ್ದವು. ವ್ಯಕ್ತಿ ಅವನ ಜಾಗ, ಗಂಡು ಹೆಣ್ಣು ಇವುಗಳ ನಡುವೆ ಅನೇಕ ರೀತಿಯ ತಾರತಮ್ಯಗಳಿದ್ದವು. ಮನುಷ್ಯನನ್ನು ಅವನ ಬಣ್ಣಗಳಲ್ಲಿ ನೋಡುವ ಕ್ರಮವಿತ್ತು. ಕೂಲಿಯಲ್ಲಿಯೂ ತಾರತಮ್ಯಗಳಿದ್ದವು. ಹೆಣ್ಣು ಗಂಡಿನಷ್ಟು ಕೆಲಸವನ್ನು ಮಾಡುವುದಿಲ್ಲವೆಂದು ನಂಬಲಾಗಿತ್ತು. ಅವಳ ದೈಹಿಕ ದುರ್ಬಲತೆಯೇ ಅವಳ ವೇತನದ ನಿಗದಿಗೆ ಕಾರಣವಾಯಿತು. ಈ ಮೂಲಕವೇ ಹೆಣ್ಣು ಮತ್ತು ಅವಳ ವ್ಯಕ್ತಿತ್ವವನ್ನು ನಿರ್ದಿಷ್ಟಪಡಿಸಲಾಯಿತು. ಮಹಿಳೆ ಮತ್ತು ಅವಳ ದುಡಿಮೆಯ ಕ್ರಮವನ್ನು ಸೀಮಿತಗೊಳಿಸಲಾಯಿತು. ಇದರಿಂದ ಉತ್ಪಾದನೆಯಲ್ಲಿ ತಾರತಮ್ಯವು ಹುಟ್ಟಿಕೊಂಡಿತು. ಹಾಗೆÀಯೇ ಮನುಷ್ಯರನ್ನು ನೋಡುವಾಗ ಅವರನ್ನು ಬಿಳಿಯರು, ಕರಿಯರು ಎಂದು ಗುರುತಿಸುವಾಗ ಅಲ್ಲಿ ಸ್ವಭಾವವನ್ನು ಮೈ ಬಣ್ಣದಿಂದಲೇ ನಿರ್ಧರಿಸಿದಂತಾಯಿತು. ಆದರೆ ಬಣ್ಣ ಮತ್ತು ಲಿಂಗ ತಾರತಮ್ಯವೇ ಸ್ವಭಾವಕ್ಕೆ ತಳಹದಿಯಾಗಿರುವುದಿಲ್ಲ. ಎಂಬ ತಿಳಿವನ್ನು ಮಾಕ್ರ್ಸ್ ಕೊಡುತ್ತಾನೆ. ಅಷ್ಟೇ ಅಲ್ಲ ಆಡಂಸ್ಮಿತ್ ತನ್ನ ವಾದದಲ್ಲಿ ಹೇಗೆ ಸೋಲುತ್ತಾನೆ ಎಂದೂ ಅವನು ವಿವರಿಸುತ್ತಾನೆ.
ಮಾಕ್ರ್ಸ್‍ವಾದದ ಪ್ರಕಾರ ಮನುಷ್ಯನ ಸ್ವಭಾವಕ್ಕೂ ಅವನು ಬಾಳುವ ಸಮಾಜಕ್ಕೂ ಒಂದು ನಿಕಟವಾದ ಸಂಬಂಧವಿದೆ. ನಿರ್ದಿಷ್ಟ ಸಮಾಜವು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಹಾಗೆಯೇ ಮನುಷ್ಯನ ವ್ಯಕ್ತಿತ್ವ ಮತ್ತು ರಾಜಕೀಯ ಸಂಸ್ಥೆಗಳಿಗೆ ಸಂಬಂಧವಿದೆಯೆಂದು ಮಾಕ್ರ್ಸ್‍ವಾದ ಹೇಳುತ್ತದೆ. ಆದರೆ ಉದಾರವಾದಿ ಪರಂಪರೆಯಲ್ಲಿ ಮನುಷ್ಯ ಮತ್ತು ಅವನ ಹಕ್ಕುಗಳಿಗೆ ಸಂಬಂಧವಿದೆ. ಇದನ್ನು ಮಾಕ್ರ್ಸ್‍ವಾದ ಹೇಳುವ ಕ್ರಮ ಭಿನ್ನವಾಗಿದೆ. ಉದಾರವಾದಿಗಳ ಪ್ರಕಾರ ಮನುಷ್ಯ ಮತ್ತು ಅವನ ವ್ಯಕ್ತಿತ್ವಕ್ಕೂ ಇರುವ ಸಂಬಂಧವು ಒಂದು ದೃಷ್ಟಿಯಿಂದ ಕೇವಲ ಆದರ್ಶ ಮಾತ್ರ. ಪ್ರಾಣಿಗಳಿಗೆ ಈ ರೀತಿಯ ವ್ಯಕ್ತಿತ್ವವೆನ್ನುವುದು ಇಲ್ಲವೆಂದು ಉದಾರವಾದವು ಹೇಳುತ್ತದೆ. ಡೆಮಾಕ್ರಸಿಯೂ ಮನುಷ್ಯನ ಹಿತವನ್ನು ಕಾಪಾಡುತ್ತದೆ ಎಂದು ಹೇಳಲಾಯಿತು. ಸರ್ವಾಧಿಕಾರವು ಮನುಷ್ಯನ ಘನತೆಯನ್ನು ಹಾಳು ಮಾಡುತ್ತದೆ, ಅಲ್ಲಿ ಮನುಷ್ಯನ ವ್ಯಕ್ತಿತ್ವಕ್ಕೆ ಯಾವುದೇ ಬೆಲೆಯಿಲ್ಲ. ಆದರೆ ಇವು ಮನುಷ್ಯನ ಚಹರೆಗಳನ್ನು ತಮಗೆ ಬೇಕಾದ ರೀತಿಯಲ್ಲಿ ವ್ಯಾಖ್ಯಾನ ಮಾಡಿವೆ. ಅನೇಕ ಸಂದರ್ಭದಲ್ಲಿ ಮನುಷ್ಯರ ಸ್ವಭಾವವನ್ನು ರಕ್ಷಿಸುವುದು ಸರಕಾರವೆಂದು ಹೇಳುತ್ತೇವೆ. ಡೆಮಾಕ್ರಸಿಯಲ್ಲಿ ಸ್ವತಂತ್ರವಾದ ಮಾರುಕಟ್ಟೆಯು ಇರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ಒಂದು ಆದರ್ಶ ಮಾತ್ರ. ಹತ್ತೊಂಬತ್ತನೆಯ ಶತಮಾನದಲ್ಲಿ ಅನೇಕ ಸಮಾಜವಾದಿಗಳು ಬಂಡವಾಳವಾದ ಮತ್ತು ಮನುಷ್ಯರ ಸ್ವಭಾವಕ್ಕೆ ಸಂಬಂಧವನ್ನು ಕಲ್ಪಿಸಿದರು. ಮನುಷ್ಯರು ಮೂಲತಃ ಸಹಕಾರ ಮನೋಭಾವದವರು, ಒಂದೇ ಕಡೆಗೆ ಅನೇಕರು ಕೆಲಸ ಮಾಡುತ್ತಾರೆ ಎಂದು ಮಾಕ್ರ್ಸ್ ಹೇಳುತ್ತಾನೆ. ಅದೇ ರೀತಿಯಲ್ಲಿ ಮನುಷ್ಯರ ಸ್ವಭಾವವೆಂದರೆ ತಮ್ಮ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳುವುದು. ಆದುದರಿಂದಲೇ ಡೆಮಾಕ್ರಸಿಯು ಮನುಷ್ಯನಿಗೆ ಒಳಿತನ್ನು ಉಂಟು ಮಾಡುತ್ತದೆ ಮತ್ತು ಸರ್ವಾಧಿಕಾರವು ಮನುಷ್ಯನಿಗೆ ಕಂಟಕಪ್ರಾಯವಾಗಿರುತ್ತದೆ ಎಂದು ಹೇಳಲಾಗಿದೆ. ಮಾಕ್ರ್ಸ್ ಮತ್ತು ಏಂಗಲ್ಸರು ಈ ವಿಷಯದಲ್ಲಿ ಸರಳ ತೀರ್ಮಾನವನ್ನು ಮಾಡಲಾಗುವುದಿಲ್ಲ ಎಂದು ಹೇಳುತ್ತಾರೆ. ಮನುಷ್ಯರು ಸಹಕಾರದ ಮನೋಭಾವದವರೇ ಅಥವಾ ಸ್ಪರ್ಧಾ ಮನೋಭಾವದವರೇ ಎಂದು ಹೇಳಲು ಬರುವುದಿಲ್ಲ. ಯಾಕೆಂದರೆ ಅವುಗಳ ಉದ್ದೇಶವೇ ಮುಖ್ಯ. ಯಾವುದು ಮನೋಭಾವವನ್ನು ನಿಯಂತ್ರಿಸುತ್ತದೆ ಎನ್ನುವುದೇ ಮುಖ್ಯ.

ಮಾಕ್ರ್ಸ್ ಹೇಳುವಂತೆ ಮನುಷ್ಯನ ಭೂತ, ವರ್ತಮಾನ ಹಾಗೂ ಭವಿಷ್ಯತ್ಕಾಲಗಳು ಮುಖ್ಯ. ಹೀಗಾಗಿ ಮನುಷ್ಯನ ಅಸ್ತಿತ್ವವನ್ನು ಚರಿತ್ರೆಯಿಂದ ಹೊರತುಪಡಿಸಿ ನೋಡಲಾಗುವುದಿಲ್ಲ. ಮನುಷ್ಯನ ಗುಣ ಮತ್ತು ಸ್ವಭಾವಗಳು ಪ್ರದೇಶ ಹಾಗೂ ಚರಿತ್ರೆಗೆ ಅನುಗುಣವಾಗಿ ಬದಲಾಗುತ್ತವೆ. ಚರಿತ್ರೆಯು ಮನುಷ್ಯನ ಸ್ವಭಾವವನ್ನು ನಿರ್ಧರಿಸುತ್ತದೆ ಎನ್ನುವುದು ನಿಜವಾದರೂ ಚಾರಿತ್ರಿಕ ಪಲ್ಲಟಕ್ಕೂ ಸಂಸ್ಕøತಿಗೂ ಸಂಬಂಧವಿದೆ ಎನ್ನುವುದನ್ನೂ ನಾವು ಮರೆಯಬಾರದು. ಮನುಷ್ಯನ ಅಸ್ತಿತ್ವದಲ್ಲಿ ಆಗಿರುವ ಬದಲಾವಣೆಯನ್ನು ಚರಿತ್ರೆಯು ಹೇಳುತ್ತದೆ. ಮನುಷ್ಯ ಯಾವಾಗ ಯಾವ ರೀತಿಯಲ್ಲಿ ಹೇಗೆ ಬದಲಾದ ಎನ್ನುವುದನ್ನು ಮಾಕ್ರ್ಸ್‍ವಾದವು ಹೇಳುತ್ತದೆ. ಹಾಗೆ ನೋಡುವುದಾದರೆ ಮನುಷ್ಯನ ಅಸ್ತಿತ್ವ ಮತ್ತು ಅವನ ಪ್ರಜ್ಞೆಗೆ ಪ್ರತ್ಯೇಕವಾದ ಗುಣಗಳಿಲ್ಲ. ಮತ್ತೊಂದು ಸಂಗತಿಯನ್ನು ನಾವು ಇಲ್ಲಿ ಯೋಚಿಸಬೇಕು, ಮನುಷ್ಯನ ಭೌತಿಕ ಅಗತ್ಯಗಳಿಗೆ ತಕ್ಕಂತೆ ಅವನ ಬದುಕು ರೂಪುಗೊಂಡಿದೆ. ಪರಿವರ್ತನೆಯು ಮನುಷ್ಯನ ಆಗುವಿಕೆಗೆ ಸಂಬಂಧಪಟ್ಟದ್ದು ಎಂದು ಮಾಕ್ರ್ಸ್‍ವಾದಿಗಳು ಹೇಳುತ್ತಾರೆ. ಹಾಗೆಂದು ವ್ಯಕ್ತಿಯು ತನ್ನಿಂದ ತಾನೇ ಪರಿವರ್ತನೆಯಾಗುವುದಿಲ್ಲ. ಅದನ್ನು ಸಾಮಾನ್ಯವಾದ ಅರ್ಥದಲ್ಲಿ ಕಾರ್ಯಕಾರಣವೆಂದು ಹೇಳುತ್ತೇವೆ. ಜಮೀನುದಾರಿ ಪದ್ಧತಿ ಮತ್ತು ಬಂಡವಾಳ ಪದ್ಧತಿ ಇವುಗಳಲ್ಲಿ ಉತ್ಪಾದನೆಯ ವಿಧಾನಗಳು ಭಿನ್ನ. ಅದಕ್ಕೆ ತಕ್ಕಂತೆ ಸಾಮಾಜಿಕ ಸಂಬಂಧಗಳು ನಿರ್ಮಾಣವಾಗುತ್ತವೆ. ಇದನ್ನು ನಾವು ಚಾರಿತ್ರಿಕಗೊಳಿಸುವಾಗ ಬೇರೆ ರೀತಿಯಲ್ಲಿ ವಿವರಿಸುತ್ತೇವೆ. ಮಧ್ಯ, ಪ್ರಾಚೀನ ಮತ್ತು ಆಧುನಿಕ ಎಂದು ಕರೆಯುವುದು ಉತ್ಪಾದನೆಯ ಕಾರಣಗಳಿಗಾಗಿ. ಬಂಡವಾಳವಾದಿ ನಾಗರಿಕತೆಯು ಪ್ರಾರಂಭವಾಗುವುದೇ ಮೆಶನರಿಗಳಿಂದ. ಆದ್ದರಿಂದ ಮಾಕ್ರ್ಸ್‍ನ ವಾದವು ಈ ದೃಷ್ಟಿಯಿಂದಲೂ ಗಮನಾರ್ಹವಾಗಿದೆ. ಬಂಡವಾಳವಾದಿ ಉತ್ಪಾದನೆಯು ಮಿಗುತಾಯ ಮೌಲ್ಯವನ್ನು ಹೇಳುತ್ತದೆ. ಹಾಗೆ ನೋಡಿದರೆ ಒಬ್ಬ ವ್ಯಕ್ತಿಯು ವ್ಯಕ್ತಿಯಾಗಿ ಮಾತ್ರವೇ ಅಲ್ಲ ಅವನು ಒಬ್ಬ ಬಂಡವಾಳವಾದಿಯಾಗಿ ಪರಿವರ್ತನೆಯಾಗುವುದನ್ನು ಕ್ಯಾಪಿಟಲ್ ಕೃತಿಯಲ್ಲಿ ಮಾಕ್ರ್ಸ್ ವಿವರಿಸುತ್ತಾನೆ.
ಮಧ್ಯಯುಗದ ಚರಿತ್ರೆಯ ಕುರಿತು ಹೇಳುವಾಗ ಮಾಕ್ರ್ಸ್‍ವಾದಿಗಳು ಒಂದು ಮಾತನ್ನು ಹೇಳುತ್ತಾರೆ. `ಆಗಿನ ಸಂದರ್ಭದಲ್ಲಿ ಮನುಷ್ಯನ ಶ್ರಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿತ್ತು. ಒಬ್ಬ ಚಪ್ಪಲಿ ಹೊಲಿಯುವವನು, ಮರಗೆಲಸದವನು, ಕಬ್ಬಿಣದ ಕೆಲಸದವನು ಕೆಲಸಗಳಲ್ಲಿ ಹೆಚ್ಚಿನ ಪ್ರಾಶಸ್ತ್ಯ ಪಡೆದುಕೊಂಡಿದ್ದರು. ಮೇಲೆ ಹೇಳಿದ ಕೆಲಸಗಳಲ್ಲಿ ವ್ಯಕ್ತಿ ಮತ್ತು ದುಡಿಮೆಗೆ ನೇರವಾದ ಸಂಬಂಧವಿತ್ತು. ಆದರೆ ಆಧುನಿಕ ಯುಗದಲ್ಲಿ ವ್ಯಕ್ತಿಯ ದುಡಿಮೆ ಮತ್ತು ಅದರ ಚಾರಿತ್ರಿಕ ಸಂಬಂಧಗಳು ಬೇರೆ. ಅಂದರೆ ನಾವು ಗಮನಿಸಬೇಕಾದ ಅಂಶವೆಂದರೆ ದುಡಿಮೆ ಮತ್ತು ಅದರ ಫಲಗಳು ಆಧುನಿಕ ಯುಗದಲ್ಲಿ ಭಿನ್ನವಾಗಿವೆ. ಹಾಗೆಂದು ಯಾವತ್ತೂ ಒಬ್ಬ ವ್ಯಕ್ತಿಯಿಂದಲೇ ಒಂದು ಚರಿತ್ರೆಯು ಬದಲಾಗುವುದಿಲ್ಲ. ಯಾವತ್ತೂ ಚರಿತ್ರೆಯು ನಿಂತ ನೀರೂ ಅಲ್ಲ. ವ್ಯಕ್ತಿಯ ಸಾಮಾಜಿಕ ಸನ್ನಿವೇಶ ಮತ್ತು ಅದರ ಹಿನ್ನೆಲೆಗಳು ಬದಲಾಗುತ್ತಲೇ ಇರುತ್ತವೆ. ಅದರೊಂದಿಗೆ ವ್ಯಕ್ತಿಯ ಚಹರೆಗಳು ಕೂಡಾ. ಬಂಡವಾಳವಾದದಲ್ಲಿ ವ್ಯಕ್ತಿಯ ಅನನ್ಯತೆಯು ಭಿನ್ನ. ಇಲ್ಲಿ ವ್ಯಕ್ತಿ ಮತ್ತು ಅವನ ಸಾಮಾಜಿಕ ಸಂಬಂಧಗಳು ಭಿನ್ನವಾಗಿರುತ್ತವೆ. ಒಬ್ಬ ವ್ಯಕ್ತಿಯು ಆಧುನಿಕ ಸನ್ನಿವೇಶದಲ್ಲಿ ಅವನು ಆರ್ಥಿಕವಾಗಿ ದಿವಾಳಿಯಾಗಿದ್ದರೂ ಕೂಡಾ ಅವನನ್ನು ನಾವು ವ್ಯಕ್ತಿಯೆಂದೇ ಗುರುತಿಸುತ್ತೇವೆ. ಅಷ್ಟೇ ಅಲ್ಲ ವ್ಯಕ್ತಿಯ ಅನನ್ಯತೆಯನ್ನು ನಾವು ಗುರುತಿಸುವಾಗ ಖಾಸಗಿ ಮತ್ತು ಸಾಮಾಜಿಕವೆಂದು ಹೇಳುತ್ತೇವೆ. ಆಧುನಿಕ ಯುಗದಲ್ಲಿ ವ್ಯಕ್ತಿಯ ಅನನ್ಯತೆ ಬೇರೆಯಾಗುವುದಕ್ಕೆ ಕಾರಣಗಳೂ ಭಿನ್ನ. ವ್ಯಕ್ತಿಯೊಬ್ಬ ಉದ್ಯೋಗವನ್ನು ಬದಲಿಸಿ ಮತ್ತು ಮನೆಯನ್ನು ಬದಲಿಸಿ ಬದುಕುತ್ತಾನೆ. ಹೀಗಾಗಿ ವ್ಯಕ್ತಿಯ ಅನನ್ಯತೆಯ ಪ್ರಶ್ನೆಯು ಯಾವಾಗಲೂ ಬೇರೆಯಾಗಿರುತ್ತದೆ. ಅನೇಕ ಸಂದರ್ಭದಲ್ಲಿ ವ್ಯಕ್ತಿಯ ಕುರಿತಾದ ನಿರೂಪಣೆಗಳು ಭಿನ್ನವಾಗಿರುತ್ತವೆ. ಅನೇಕ ಸಂದರ್ಭದಲ್ಲಿ ವ್ಯಕ್ತಿಯ ಅನನ್ಯತೆಯೆಂದು ಯಾವುದನ್ನು ಕರೆಯುತ್ತೇವೆಯೋ ಅದು ಖಾಸಗಿಯೂ ಆಗಿರುತ್ತದೆ. ಒಂದು ಅನುಭವ ಮತ್ತು ಅದರ ಅಭಿವ್ಯಕ್ತಿಯು ಕೇವಲ ಪ್ರಾದೇಶಿಕವಾಗಿರುವುದಿಲ್ಲ. ಸಾಮಾಜಿಕ ಏಕತೆಗೂ ಅದರ ಅಭಿವ್ಯಕ್ತಿಗೂ ಸಂಬಂಧಾಂತರಗಳು ಬೇರೆಯಾಗಿರುತ್ತವೆ. ವ್ಯಕ್ತಿ ಮತ್ತು ಅವನ ಅನುಭವವನ್ನು ಹೇಳುವ ಕ್ರಮಗಳು ಆಯಾ ಕಾಲದಲ್ಲಿ ಬೇರೆಬೇರೆಯಾಗಬಹುದು. ಆದರೆ ವ್ಯಕ್ತಿ ಮತ್ತು ಅವನ ಅನುಭವಗಳು ಆಯಾ ಸಂದರ್ಭದಲ್ಲಿ ಬೇರೆಯಾಗುತ್ತಾ ಹೋಗುತ್ತವೆ. ಹಾಗೆಯೇ ವ್ಯಕ್ತಿಯ ಪ್ರಜ್ಞೆ ಮತ್ತು ಅವನ ಅನುಭವವನ್ನು ಒಂದು ವಿವರದ ಮೂಲಕ ಹೇಳುವ ಕ್ರಮವು ಬೇರೆಯಾಗಿರುತ್ತದೆ. ವ್ಯಕ್ತಿಯ ಪ್ರಜ್ಞೆ ಮತ್ತು ಅವನ ವಿಶ್ವಾತ್ಮಕ ಪ್ರಜ್ಞೆಯು ಭಿನ್ನವಾಗಿರುತ್ತದೆ. ಇಲ್ಲಿ ಮತ್ತೊಂದು ಅಂಶವನ್ನು ನಾವು ಗಮನಿಸಬೇಕು, ಆಧುನಿಕ ಬಂಡವಾಳವಾದವು ವ್ಯಕ್ತಿಯನ್ನು ನಿರ್ದೇಶಿಸುವ ಕ್ರಮಗಳು ಬೇರೆ. ಒಬ್ಬ ವ್ಯಕ್ತಿಯಾಗುವುದು ಮತ್ತು ಅವನ ಅನನ್ಯತೆಯು ಮಾತ್ರವೇ ಬಂಡವಾಳವಾದಕ್ಕೆ ಮುಖ್ಯವಾಗಿದೆ.
ಯಾವುದನ್ನು ನಾವು ಜಮೀನುದಾರಿ ಪದ್ಧತಿಯ ಸಮಾಜವೆಂದು ಹೇಳುತ್ತೇವೆಯೋ ಅದರ ಚರಿತ್ರೆಯು ಮಾತ್ರ ಯುದ್ಧಗಳ ಮೇಲೆ ನಿಂತಿದೆ. ಆ ಸಮಾಜವು ಯುದ್ಧವನ್ನು ತುಂಬಾ ಶ್ರೇಷ್ಠವೆಂದು ಪ್ರತಿಪಾದಿಸಿತು. ನಮಗೆ ಗೊತ್ತಿರಬೇಕಾದ ಅಂಶವೆಂದರೆ ಚರಿತ್ರೆಯು ಬದಲಾದರೂ ಹಸಿವೆಯು ಹಸಿವೆಯೇ ಆಗಿರುತ್ತದೆ. ಬಂಡವಾಳವಾದದಲ್ಲಿ ವ್ಯಕ್ತಿಯ ಶಕ್ತಿ ಮತ್ತು ಅವನ ದುಡಿಮೆಯು ಲಾಭದ ಪ್ರಶ್ನೆಯ ಮೂಲಕ ಚಾಲ್ತಿಗೆ ಬರುತ್ತದೆ. ಹಾಗೂ ಅದುವೇ ನಿಜವಾದ ಮೌಲ್ಯವೆಂಬಂತೆ ಬಿಂಬಿತವಾಗುತ್ತದೆ. ಸಾಮಾಜಿಕ ಮತ್ತು ರಾಜಕೀಯವಾದ ರಚನೆಗಳು ನಮ್ಮನ್ನು ಭಿನ್ನವಾಗಿಯೂ ನೋಡುತ್ತದೆ. ಬಂಡವಾಳವಾದವು ಮನುಷ್ಯನನ್ನು ನಿಯಂತ್ರಿಸುವುದೂ ನಿಜ.

(ಭಾಗ 2
ಮುಂದಿನ ಸಂಚಿಕೆಯಲ್ಲಿ)

ಪ್ರೊ. ಕೇಶವ ಶರ್ಮ
ಪ್ರಾಧ್ಯಾಪಕರು
ಕುವೆಂಪು ವಿಶ್ವವಿದ್ಯಾಲಯ,
ಶಂಕರ ಘಟ್ಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...