ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿದ್ದ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಭಾನುವಾರ (ಡಿ. 19) ಮೊದಲಿದ್ದ ಸ್ಥಳದಲ್ಲಿಯೇ ರಾಯಣ್ಣ ಪುತ್ಥಳಿ ಮರುಪ್ರತಿಷ್ಠಾಪನೆ ಮಾಡಲಾಗಿದೆ.
ಆರು ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸ್ಥಳೀಯರು ಹಾಲಿನ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಕನ್ನಡಪರ ಸಂಘಟನೆಗಳು, ಸ್ಥಳೀಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಶನಿವಾರ ಮುಂಜಾನೆ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿದ್ದ ಘಟನೆ ಸಂಭವಿಸಿತ್ತು. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಜಿಲ್ಲೆಯಲ್ಲಿ ಡಿಸೆಂಬರ್ 20 ರವರೆಗೆ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಎಂಇಎಸ್ ಪುಂಡರ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ನಾಯಕರು ಘಟನೆಯನ್ನು ಖಂಡಿಸಿದ್ದರು.
ನಟ ದರ್ಶನ್ ತೂಗುದೀಪ “ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು” ಎಂದು ಸಿಎಂ ಅವರಲ್ಲಿ ಮನವಿ ಮಾಡಿದ್ದರು.


