ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ 6 ಚರಣಗಳನ್ನು ಹಾಡುವ ಬದಲು, ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಅಧಿಕೃತ ಆದೇಶ ಹೊರಡಿಸಿದೆ.
1937ರ ಕಾಂಗ್ರೆಸ್ ಐತಿಹಾಸಿಕ ನಿರ್ಣಯದಂತೆ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದು ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಭಿಪ್ರಾಯಪಟ್ಟಿದ್ದರು. ಇದಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ವಂದೇ ಮಾತರಂ ಗೀತೆಯ ಎಲ್ಲಾ 6 ಚರಣಗಳನ್ನು ಕಡ್ಡಾಯವಾಗಿ ಹಾಡುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಎಲ್ಲಾ ರಾಜಕೀಯ ಮತ್ತು ಸೈದ್ಧಾಂತಿಕ ಬೆಳವಣಿಗೆಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಪ್ರಮುಖ ತೀರ್ಮಾನ ಕೈಗೊಂಡಿದೆ.
ಸರ್ಕಾರದ ಆದೇಶದಲ್ಲಿ ಏನಿದೆ?
ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಗೀತೆಯ ವಿವಿಧ ಆವೃತ್ತಿಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗಾಯನ ಅಥವಾ ವಾದನದ ಸಂದರ್ಭದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಲ್ಲಿ ಸಾಮೂಹಿಕ ಗಾಯನ ಮತ್ತು ವಾದನದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.
ರಾಜ್ಯದಲ್ಲಿ ನಡೆಯುವ ವಿವಿಧ ಸಮಾರಂಭಗಳ ಸ್ವರೂಪಕ್ಕೆ ಅನುಗುಣವಾಗಿ ಏಕರೂಪತೆ, ಸೂಕ್ತ ಶಿಷ್ಟಾಚಾರ ಮತ್ತು ಗೌರವವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ಹೊರಡಿಸಿರುವ ಆದೇಶದಂತೆ, ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಭಾಗವಹಿಸುವ ಅತ್ಯುನ್ನತ ಮಟ್ಟದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಇನ್ನುಳಿದ ಎಲ್ಲಾ ಸಾಂಸ್ಥಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ 2 ಚರಣಗಳನ್ನು ಮಾತ್ರ ಹಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ.
ಕೇಂದ್ರದ ಸಂಘಪರಿವಾರ ಪ್ರೇರಿತ ರಾಷ್ಟ್ರೀಯತೆ ಹೇರಿಕೆಗೆ ಕೌಂಟರ್ ನೀಡಲು ಮತ್ತು ಬಹುಸಂಸ್ಕೃತಿಯ ಭಾರತದ ಧಾರ್ಮಿಕ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.


