ಕೊರೊನಾ ಸಾಂಕ್ರಾಮಿಕದಿಂದಾಗಿ ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ವಿದ್ಯಾರ್ಥಿಗಳನ್ನು ಗ್ರೇಡಿಂಗ್ ಮೇಲೆ ಉತ್ತೀರ್ಣ ಮಾಡಲಾಗುವುದು ಎಂದು ತಿಳಿಸಿತ್ತು. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಪ್ರಕರಣ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಲು ಕೇಳಿದೆ.
ಈಗೀನ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ಪುನರಾವರ್ತಿತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಸದ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಮಾಡುವುದಕ್ಕೆ ತಡೆ ನೀಡಿದೆ.
ರಾಜ್ಯ ಸರ್ಕಾರದ ವಿರುದ್ಧ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಬುಧವಾರ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು, ಗುರುವಾರದವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡದಂತೆ ತಿಳಿಸಿದ್ದು, ಜೂನ್ 17ರ ಒಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಿ ಘೋಷಿಸಿದ್ದ ರಾಜ್ಯ ಸರ್ಕಾರದ ಪರವಾಗಿ, ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ’ರಾಜ್ಯದ ಹಿಂದಿನ ಶಿಕ್ಷಣ ಸಚಿವರು, ಶಿಕ್ಷಣ ತಜ್ಞರು ಸೇರಿದಂತೆ ಹಲವರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಮೂರು ಸುತ್ತಿನ ಚರ್ಚೆ ನಡೆದಿದೆ. ಶಿಕ್ಷಣ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡಿಕೊಂಡು ಬರುತ್ತಿರುವವರೊಂದಿಗೂ ಮಾತನಾಡಿದ್ದೇನೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದಿದ್ದರು.
ಇದನ್ನೂ ಓದಿ: ಲಾಕ್‌ಡೌನ್ ಮತ್ತಷ್ಟು ಸಡಿಲಿಸುವ ಮುನ್ಸೂಚನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ


