ದೇಶದಲ್ಲಿ ಓಮಿಕ್ರಾನ್ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ನಡುವೆಯೇ ರಾಜ್ಯದಲ್ಲಿಯೂ ಲಾಕ್‌ಡೌನ್ ಜಾರಿಯಾಗುವ ಬಗ್ಗೆ ವದಂತಿ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಹೇಳಿದ್ದಾರೆ.
”ಸದ್ಯಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.
’ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?
ಇನ್ನು ಕ್ಲಸ್ಟರ್‌ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್‌ನಲ್ಲಿನ ಕಸ್ಟರ್‌ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲೂ ಸಹ ಸೂಚನೆ ನೀಡಲಾಗಿದೆ ಎಂದಿದ್ದಾರೆ.
—————


