Homeಚಳವಳಿಮಾತು ತಪ್ಪಿದ ಮೋದಿ ವಿರುದ್ಧ ಮತ್ತೆ ಕಿಸಾನ್ ಪಂಚಾಯತ್‌; ದೆಹಲಿಯಲ್ಲಿ ಇಂದು ಪ್ರತಿಭಟನೆ

ಮಾತು ತಪ್ಪಿದ ಮೋದಿ ವಿರುದ್ಧ ಮತ್ತೆ ಕಿಸಾನ್ ಪಂಚಾಯತ್‌; ದೆಹಲಿಯಲ್ಲಿ ಇಂದು ಪ್ರತಿಭಟನೆ

- Advertisement -
- Advertisement -

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸೋಮವಾರ ನಡೆಯಲಿರುವ ಕಿಸಾನ್ ಮಹಾಪಂಚಾಯತ್‌ನಲ್ಲಿ ಸಾವಿರಾರು ರೈತರು ಸೇರಲಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೆ ಒತ್ತಾಯಿಸಿ ನಡೆಯುತ್ತಿರುವ ಈ ಹೋರಾಟದ ಸ್ಥಳಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಸ್ಥಳಕ್ಕೆ ಸುಮಾರು 2,000 ಭದ್ರತಾ ಸಿಬ್ಬಂದಿಯನ್ನು ದೆಹಲಿ ಪೊಲೀಸ್‌ ಇಲಾಖೆ ನಿಯೋಜಿಸಿದೆ.

ಮಹಾಪಂಚಾಯತ್‌ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜನಸಂದಣಿ ನಿರ್ವಹಣೆಗೆ, ಯಾವುದೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ತಡೆಯುವುದಕ್ಕಾಗಿ, ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾಪಂಚಾಯತ್‌ನಲ್ಲಿ ಸುಮಾರು 15,000-20,000 ಜನರು ಭಾಗವಹಿಸುವ ಸಾಧ್ಯತೆಯಿದೆ. ಭಾನುವಾರ ರಾತ್ರಿಯಿಂದಲೇ ರಾಮಲೀಲಾ ಮೈದಾನದತ್ತ ರೈತರು ದಾವಿಸಲಿದ್ದಾರೆ” ಎಂದು ದೆಹಲಿ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಮಲೀಲಾ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಸಂಚಾರವನ್ನು ಮಾಡದಂತೆ ಸಾರ್ವಜನಿಕರು ಮತ್ತು ವಾಹನ ಚಾಲಕರಿಗೆ ಸೂಚಿಸಲಾಗಿದೆ. ವಿಶೇಷವಾಗಿ ದೆಹಲಿ ಗೇಟ್‌ನಿಂದ ಅಜ್ಮೇರಿ ಗೇಟ್ ಚೌಕ್‌ವರೆಗಿನ ಜೆಎಲ್‌ಎನ್ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಲಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸಂಬಂಧ ಕಾನೂನಿನ ಖಾತರಿಗಾಗಿ ಒತ್ತಾಯಿಸಲು ಕಿಸಾನ್ ಮಹಾಪಂಚಾಯತ್ ನಡೆಸಲಾಗುತ್ತಿದೆ” ಎಂದು ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಹೇಳಿಕೆ ನೀಡಿದೆ.

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಲಕ್ಷಾಂತರ ರೈತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದಾರೆ ಎಂದು ಕಿಸಾನ್‌ ಮೋರ್ಚಾ ಮಾಹಿತಿ ನೀಡಿದೆ.

ಇದನ್ನೂ ಓದಿರಿ: ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಸಾನ್ ಮೋರ್ಚಾ ನಾಯಕ ದರ್ಶನ್ ಪಾಲ್, “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಡಿಸೆಂಬರ್ 9, 2021ರಂದು ಲಿಖಿತವಾಗಿ ನಮಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಮತ್ತು ನಿರಂತರವಾಗಿ ಹೆಚ್ಚುತ್ತಿರುವ ರೈತರು ಎದುರಿಸುತ್ತಿರುವ ಬಿಕ್ಕಟ್ಟನ್ನು ತಗ್ಗಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಈಗ ರದ್ದುಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷ ಕಾಲ ಹೋರಾಟವನ್ನು ಕಿಸಾನ್‌ ಮೋರ್ಚಾ ಮುನ್ನಡೆಸಿತ್ತು. ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ಬಾಕಿ ಉಳಿದಿರುವ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಡಿಸೆಂಬರ್ 2021 ರಲ್ಲಿ ಹೋರಾಟವನ್ನು ಹಿಂಪಡೆಯಲಾಗಿತ್ತು.

ನಮ್ಮ ಬೇಡಿಕೆಗಳಿಗೆ ವಿರುದ್ಧವಾಗಿರುವ ಎಂಎಸ್‌ಪಿ ಸಮಿತಿಯನ್ನು ವಿಸರ್ಜನೆ ಮಾಡಬೇಕು ಎಂದು ಕಿಸಾನ್ ಮೋರ್ಚಾ ಆಗ್ರಹಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...