ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ (ಮೇ 27) ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
“ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ” ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.
“ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಮೊದಲು ಅಸಹಜ ಸಾವಿನ ಪ್ರಕರಣ ದಾಖಲಾಗಿತ್ತು. ನಂತರ ಡೆತ್ ನೋಟ್ ಪತ್ತೆಯಾದ ಹಿನ್ನೆಲೆ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆರೋಪಿಗಳು ನಾಪತ್ತೆ
ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳಾದ ಸರ್ಕಾರಿ ನೌಕರರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರ ಸ್ಪಷ್ಟನೆ ಏನು?
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, “ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಚಂದ್ರಶೇಖರನ್ ನಿವಾಸಕ್ಕೆ ಸಿಐಡಿ ತಂಡ ಭೇಟಿ
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಚಂದ್ರಶೇಖರನ್ ನಿವಾಸಕ್ಕೆ ಡಿವೈಎಸ್‌ಪಿ ರಫೀಕ್ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಸಂಜೆ ಭೇಟಿ ನೀಡಿದೆ. ಚಂದ್ರಶೇಖರನ್ ಪತ್ನಿ ಕವಿತಾ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದ ಅಧಿಕಾರಿಗಳು, ಚಂದ್ರಶೇಖರನ್ ಸಾವಿನ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ: ಚಿಕ್ಕಪ್ಪನ ವಿರುದ್ಧ ಎಫ್‌ಐಆರ್
ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777 ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.


