ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ವರದಿ ಬಗ್ಗೆ ನಾವು ನಿರೀಕ್ಷಿಸಿದಂತೆ ತನಿಖೆ ನಡೆದಿಲ್ಲ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದಲ್ಲಿ ಸ್ವತಂತ್ರ ಮೇಲ್ವಿಚಾರಣೆಗೆ ಆದೇಶಿಸುವುದಾಗಿ ತಿಳಿಸಿರುವ ನ್ಯಾಯಪೀಠವು, ರಾಜಕೀಯ ಆಟಗಳು ಇದರಲ್ಲಿ ಬೇಡ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ ನಡೆಸಲಿ ಎಂದು ಹೇಳಿದೆ. ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
“ಎರಡು ಎಫ್‌ಐಆರ್‌ಗಳ ಸಾಕ್ಷ್ಯಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಹೀಗಾಗಿ ದಿನನಿತ್ಯದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ನಾವು ಒಲವು ತೋರುತ್ತೇವೆ. ನಿಮ್ಮ ರಾಜ್ಯ ಸರ್ಕಾರದ ನ್ಯಾಯಾಧೀಶರು ನಮಗೆ ಬೇಡ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ” ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.
ಎಂಟು ಜನರ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅಕ್ಟೋಬರ್ 8 ರಂದು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ


