ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಕುಟುಂಬ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪದ ಕುರಿತು ತನಿಖೆಗೆ ಹೈಕೋರ್ಟ್ ಆದೇಶದಂತೆ ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಗುರುವಾರ (ಜ.30) ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ತನಿಖೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಸಮಯವಕಾಶ ನೀಡುವಂತೆ ನಾವು ಕೋರಿದ್ದೆವು. ಆದರೆ, ಹೈಕೋರ್ಟ್ ಸಮಯ ಕೊಟ್ಟಿಲ್ಲ. ಹಾಗಾಗಿ, ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಫೆಬ್ರವರಿ 21ರ ಒಳಗೆ ವರದಿ ಸಲ್ಲಿಸಲಾಗುವುದು” ಎಂದಿದ್ದಾರೆ.
ಹೆಚ್‌ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿ ವ್ಯಾಪ್ತಿಯ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್.ಆರ್ ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಬುಧವಾರ (ಜ.29) ನಡೆಸಿತ್ತು.
ವಿಚಾರಣೆ ವೇಳೆ ಭೂ ಒತ್ತುವರಿ ತೆರವಿಗೆ ಕ್ರಮ ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
“ಪ್ರತಿವಾದಿಗಳು ಪ್ರಭಾವಿಗಳು (ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ಮುಂತಾದವರು) ಎಂದು ನೀವು ಐದು ವರ್ಷ ಏನೂ ಮಾಡಿಲ್ಲ ತಾನೆ? ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ನೀವು ಅಸಮರ್ಥರು ಎಂದಾದರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೊ ಅಲ್ಲಿಗೆ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ಸರಿಹೋಗ್ತೀರಿ” ಎಂದು ಕಠಾರಿಯಾ ಅವರ ವಿರುದ್ದ ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿರುವ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.


