ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಪಘಾತಕ್ಕೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಶನಿವಾರ (ಸೆ.13) ಹಾಸನಕ್ಕೆ ಭೇಟಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಇದಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟಿರುವ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಟ್ರಕ್ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲ ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಕೂಡ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ದುರಂತಕ್ಕೆ ರಸ್ತೆ ಸಮಸ್ಯೆಯೂ ಒಂದು ಕಾರಣ. ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ, ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಮತ್ತು ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಾಟೀಲ್ ಪತ್ರ ಬರೆಯುತ್ತೇವೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆಯೂ ಪತ್ರದಲ್ಲಿ ಒತ್ತಾಯಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ (ಸೆ.12) ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಮಂದಿ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ದುರಂತದ ಗಾಯಾಳುಗಳಿಗೂ ಸರ್ಕಾರದಿಂದ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚುವರಿ ಕೆಎಸ್‌ಆರ್‌ಪಿ ತುಕಡಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ


