ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಲಂಚ, ಕಮಿಷನ್‌ಗಳು ಮಿತಿ ಮೀರಿವೆ. ಹಾಗಾಗಿ ಲೋಕಾಯುಕ್ತ ದಾಳಿಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರನ್ನು ಕೂಡಲೇ ಬಂಧಿಸಬೇಕು ಮತ್ತು ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ.
ಸಿಎಂ ಮನೆ ಮುತ್ತಿಗೆ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಲಂಚ ಸ್ವೀಕಾರದ ವಿಚಾರದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು. ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದರು.
ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಈಗ ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಇನ್ನೂ ಸಾಕ್ಷಿ ಬೇಕೆ? ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಬೊಮ್ಮಾಯಿ ಯಾವ ಮುಖ ಇಟ್ಟುಕೊಂಡು ಇನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ. ಈಗ ನಿಮ್ಮ ಶಾಸಕರ ವಿಚಾರ ನೋಡಿದ್ದೀರಲ್ಲ, ಇದಕ್ಕೆ ಈಗೇನು ಹೇಳುತ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಅಮಿತ್ ಶಾ ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತಿತ್ತೇನೋ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್ ಎಸ್ ಎಸ್ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ ಎಂದರು.
ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಕೆಜೆ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು. ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ. ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐಗೆ ವಹಿಸಿದ್ದೆ. ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ʼಬಿʼ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ ಎಂದರು.
“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ ಎಂದರು.
ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಶಾಸಕರಾದ ರಾಮಲಿಂಗಾರೆಡ್ಡಿ ಮಾತನಾಡಿದರು. ನಂತರ ಸಿಎಂ ಮನೆ ಮುತ್ತಿಗೆಗೆ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಮುಂದಾದಾದ ಪೊಲೀಸರು ಅವರನ್ನು ತಡೆದಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: 20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?


