ಪಶ್ಚಿಮ ಬಂಗಾಳದಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಪ್ರತಿಭಟನೆಯ ನಡುವೆ, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಶನಿವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆಗಳನ್ನು ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆಶಾದೇವಿ ತಿಳಿಸಿದ್ದಾರೆ.
ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ.
ಸಂತ್ರಸ್ತೆಗೆ ನ್ಯಾಯಕ್ಕಾಗಿ ಆಕೆಯ ಕಾಲೇಜಿನ ವಿದ್ಯಾರ್ಥಿಗಳು ಮತ್ತು ದೇಶದ ವಿವಿಧ ಭಾಗಗಳಲ್ಲಿ ವೈದ್ಯರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಬ್ಯಾನರ್ಜಿ ಅವರನ್ನು ಟೀಕಿಸಿದ ಆಶಾ ದೇವಿ, “ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಮಮತಾ ಬ್ಯಾನರ್ಜಿ ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.
“ಈ ಸಮಸ್ಯೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿದ್ದಾರೆ, ಅವರು ಸ್ವತಃ ಮಹಿಳೆಯಾಗಿದ್ದಾರೆ, ಅವರು ರಾಜ್ಯದ ಮುಖ್ಯಸ್ಥೆಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾದ ಕಾರಣ ರಾಜೀನಾಮೆ ನೀಡಬೇಕು” ಎಂದು ಅವರು ಹೇಳಿದರು.
ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತ್ಯಾಚಾರಿಗಳಿಗೆ ನ್ಯಾಯಾಲಯದಿಂದ ಶೀಘ್ರ ಶಿಕ್ಷೆಗೆ ಗುರಿಯಾಗುವವರೆಗೆ, ಇಂತಹ ಕ್ರೌರ್ಯವು ದೇಶದ ವಿವಿಧ ಭಾಗಗಳಲ್ಲಿ ಪ್ರತಿದಿನ ನಡೆಯುತ್ತಲೇ ಇರುತ್ತದೆ ಎಂದು ಆಶಾದೇವಿ ಹೇಳಿದರು.
“ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ ಮತ್ತು ಅಂತಹ ಅಮಾನುಷತೆ ಅವರ ವಿರುದ್ಧ ನಡೆದಾಗ, ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದರು.
ಇದನ್ನೂ ಓದಿ; ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಮಾನಸಿಕ ಪರೀಕ್ಷೆ ನಡೆಸಿದ ಸಿಬಿಐ


