ಹಲವು ಮಂದಿ ಬಿಜೆಪಿ-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಮಂದಿ ಕೈ ಹಿಡಿದಿದ್ದಾರೆ.
ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ, ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, “ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ” ಎಂದಿದ್ದಾರೆ.
“ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಕಾವೇರಿ ವಿಚಾರವನ್ನು ಭಾವನಾತ್ಮಕವಾಗಿ ಬಳಸಿಕೊಂಡಿದ್ದಾರೆ. ರೈತರ ಹೆಸರೇಳಿಕೊಂಡು ಜನತಾದಳ ಕೇವಲ ರಾಜಕಾರಣ ಮಾಡಿದೆ. ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಶೂನ್ಯ. ಚೆಲುವರಾಯ ಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮೆಡಿಕಲ್ ಕಾಲೇಜು ತಂದರು” ಎಂದು ಹೇಳಿದ್ದಾರೆ.
“ಜನತಾದಳದವರು ನನಗೆ ಟಿಕೆಟ್ ಮಾತ್ರ ನೀಡಿದರು. ಆದರೆ, ಬೆಂಬಲ ನೀಡಿರಲಿಲ್ಲ. ಕೇವಲ ಕುಟುಂಬದ ಪರವಾಗಿ ಮಾತ್ರ ಪಕ್ಷದ ಸಭೆಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ನಾನು ಅನೇಕ ಬಾರಿ ಇದರ ವಿರುದ್ಧ ದನಿ ಎತ್ತಿದ್ದೇನೆ. ರೈತ ವಿರೋಧಿ ಕಾಯ್ದೆಗಳನ್ನು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದಾಗ ನಾನು ವಿರೋಧ ವ್ಯಕ್ತಪಡಿಸಿದ್ದೆ” ಎಂದು ಸ್ಮರಿಸಿಕೊಂಡರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು), ಶಾಸಕರಾದ ಉದಯ್, ರವಿ ಗಣಿಗ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ,ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ರಾಜ್ಯದ 17 ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ