ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಎರಡನೇ ದಿನಕ್ಕೂ ಮುಂದುವರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪ್ರಥಮ ಮತ್ತು ಎರಡನೇ ಪ್ರಾಶಸ್ತ್ಯದ ಮತಗಳಲ್ಲಿಯೂ ಮುನ್ನಡೆ ಸಾಧಿಸಿದ್ದು ಗೆಲುವಿನತ್ತ ಮುನ್ನಡೆದಿದ್ದಾರೆ. ಆ ಮೂಲಕ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿನ ದಾಖಲೆ ಬರೆಯಲು ಸಜ್ಜಾಗಿದೆ.
ಕೋಟಾ ಪ್ರಕಾರ 46,093 ಮತಗಳನ್ನು ಪಡೆದ ಅಭ್ಯರ್ಥಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗುತ್ತಾರೆ. ಆದರೆ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ ಯಾರೊಬ್ಬರು ಅಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ 33,403 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ 26,983 ಮತಗಳನ್ನು ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು 17,399 ಮತಗಳನ್ನು ಪಡೆದಿದ್ದಾರೆ. ಹಾಗಾಗಿ ಕಾಂಗ್ರೆಸ್ 6,420 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಕಣದಲ್ಲಿ ಒಟ್ಟು 19 ಸ್ಪರ್ಧಿಗಳು ಇದ್ದರು. ಠೇವಣಿ ಕಳೆದುಕೊಂಡ 13 ಮಂದಿಯನ್ನು ಎಲಿಮಿನೇಟ್ ಮಾಡಲಾಗಿದ್ದು, ಉಳಿದವರ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ನಡೆಯುತ್ತಿದೆ. ಆ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಗಾಗಿ ಅವರು ಗೆಲುವು ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ. ಆ ಮೂಲಕ ಕಾಂಗ್ರೆಸ್ ಈ ಪದವೀಧರ ಕ್ಷೇತ್ರವನ್ನು ಮೊದಲ ಬಾರಿಗೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಇನ್ನೊಂದೆಡೆ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ 6,405 ಮತಗಳಿಗೆ ತೃಪ್ತಿಪಟ್ಟುಕೊಂಡರು. ಹುಕ್ಕೇರಿ 5,045 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.
ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು 7500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಎರಡು ಸ್ಥಾನ ಮತ್ತು ಬಿಜೆಪಿ ಎರಡು ಸ್ಥಾನ ತನ್ನದಾಗಿಸಿಕೊಂಡಿವೆ.
ಇದನ್ನೂ ಓದಿ; ರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ


