ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಉಚ್ಚಾಟಿಸಿದೆ.
ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾದ ಶಿವಮೊಗ್ಗದ ಎಸ್.ಪಿ ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಬೆಂಗಳೂರಿನ ಫರ್ಡಿನಾಂಡ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಚಿಕ್ಕಮಗಳೂರಿನ ಬಿ.ಆರ್. ನಂಜೇಶ್ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆಯ ಲೋಕೇಶ್ ಮತ್ತು ಬೆಂಗಳೂರಿನ ಬ್ಯಾಟರಾಯನಪುರದ ವಿನೋದ್ ಶಿವರಾಜ್ ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟಿತ ಬಂಡಾಯ ಅಭ್ಯರ್ಥಿಗಳು ಕಾಂಗ್ರೆಸ್‌ನಿಂದ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ, ಪಕ್ಷ ಟಿಕೆಟ್ ನೀಡದ ಹಿನ್ನೆಲೆ ಬಂಡಾಯವಾಗಿ ಕಣಕ್ಕಿಳಿದ್ದಾರೆ. ಕಾಂಗ್ರೆಸ್ ನಾಯಕರು ಇವರ ಮನವೊಲಿಕೆ ಪ್ರಯತ್ನ ನಡೆಸಿದ್ದು, ವಿಫಲವಾದ ಹಿನ್ನೆಲೆ ಉಚ್ಚಾಟನೆ ಮಾಡಿದ್ದಾರೆ.
ಇತ್ತ ಬಿಜೆಪಿಯೂ ಬಂಡಾಯ ಅಭ್ಯರ್ಥಿಗಳ ವಿರುದ್ದ ಕ್ರಮಕ್ಕೆ ಮುಂದಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಡಿಸ್ ನೀಡಿ ಸ್ಪಷ್ಟೀಕರಣ ಕೇಳಿದ್ದಾರೆ.
ಇದನ್ನೂ ಓದಿ : ‘ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದೆ ದೇವೇಗೌಡರು..’; ಬಹಿರಂಗ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ


