ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ದಾಖಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು(ಸೆ.25)ಆದೇಶಿಸಿದೆ.
ತನಿಖೆಯ ಅಂತಿಮ ವರದಿಯನ್ನು ಮೂರು ತಿಂಗಳ ಒಳಗಾಗಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರಿನ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಲಯ ಇಂದು ಪ್ರಕಟಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆಯಷ್ಟೇ ಹೈಕೋರ್ಟ್ ವಜಾಗೊಳಿಸಿತ್ತು.
ಸಿದ್ದರಾಮಯ್ಯ ಅರ್ಜಿ ವಿಚಾರಣೆ ವೇಳೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿತ್ತು. ನಿನ್ನೆ ಆ ತಡೆಯನ್ನು ತೆರವು ಮಾಡಿದೆ.
ಹೈಕೋರ್ಟ್ ಆದೇಶದ ಪ್ರತಿಯನ್ನು ಫಿರ್ಯಾದುದಾರ ಸ್ನೇಹಮಯಿ ಕೃಷ್ಣ ಇಂದು ಬೆಳಿಗ್ಗೆ ತನ್ನ ವಕೀಲರಾದ ಲಕ್ಷ್ಮಿ ಅಯ್ಯಂಗಾರ್ ಮುಖಾಂತರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಸಲ್ಲಿಸಿದ್ದರು.
ಇದನ್ನೂ ಓದಿ : ‘ರಾಜೀನಾಮೆ ಪ್ರಶ್ನೆಯೆ ಇಲ್ಲ’ | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ


