ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಗುರುವಾರ (ಸೆ.12) ಆದೇಶ ಕಾಯ್ದಿರಿಸಿದೆ.
ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೇಳಿದೆ.
ಗುರುವಾರ ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ನ್ಯಾಯಾಲಯಕ್ಕೆ ಪ್ರತ್ಯುತ್ತರ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, “ರಾಜ್ಯಪಾಲರು ಸಿಎಂಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವ ಶಿಫಾರಸ್ಸಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ಎದ್ದು ಕಾಣುವ ಅತಾರ್ಕಿಕ ಅಂಶಗಳನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದಲ್ಲಿ ಪಟ್ಟಿ ಮಾಡಿಲ್ಲ. ಸಂಪುಟದ ಶಿಫಾರಸ್ಸು ಪಕ್ಷಪಾತಿ ಎಂಬುವುದನ್ನಷ್ಟೇ ಹೇಳಿದ್ದಾರೆ. ಈ ಮೂಲಕ ಸ್ವತಂತ್ರವಾಗಿ ವಿವೇಚನೆ ಬಳಸಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿಸುವಾಗ ತನಿಖಾಧಿಕಾರಿ ಅಭಿಪ್ರಾಯ ರೂಪಿಸಿರಬೇಕು. ಇದು ಹಾಲಿ ಪ್ರಕರಣದಲ್ಲಿ ಪಾಲನೆಯಾಗಿಲ್ಲ. ಹಾಗಾಗಿ, ರಾಜ್ಯಪಾಲರ ಆದೇಶವನ್ನು ವಜಾ ಮಾಡಬೇಕು” ಎಂದು ಕೋರಿದರು.
ಮುಂದುವರೆದು, “ರಾಜ್ಯಪಾಲರು ತಮ್ಮ ಆದೇಶದಲ್ಲಿ ಉಲ್ಲೇಖಿಸಿರುವ ಮಧ್ಯಪ್ರದೇಶ ಪೊಲೀಸ್ ಸ್ಥಾಪನಾ ತೀರ್ಪಿನ ಪ್ರಕರಣವು ಸಂಪೂರ್ಣವಾಗಿ ಸಿದ್ದರಾಮಯ್ಯ ಪರವಾಗಿದೆ. ಆದರೆ, ಅದನ್ನು ಅವರು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ. ಇನ್ನು, ದೂರುದಾರ ಅಬ್ರಹಾಂ ಅವರು ಪ್ರಾಮಾಣಿಕರಲ್ಲ. ಅವರಿಗೆ 25 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ” ಎಂದರು.
ಈ ವೇಳೆ ಮಧ್ಯ ಪ್ರವೇಶಿಸಿದ ಪೀಠ, “ಯಾವ ಸಂಪುಟ ತನ್ನ ನಾಯಕನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿ ಎಂದು ಹೇಳುತ್ತದೆ?” ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸಿಂಘ್ವಿ, “ರಾಜಕೀಯದಲ್ಲಿ ಸಾಕಷ್ಟು ಬಾರಿ ಸಂಪುಟ ತಮ್ಮ ಮುಖ್ಯಮಂತ್ರಿ ವಿರುದ್ಧ ನಡೆದುಕೊಂಡಿದೆ” ಎಂದು ಸಮಜಾಯಿಷಿ ನೀಡಿದರು.
ಸಿಎಂ ಪರವಾಗಿಯೇ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, “ಅಬ್ರಹಾಂ ಅವರ ಜೊತೆ ರಾಜ್ಯಪಾಲರು ಚರ್ಚಿಸಿದ್ದಾರೆ. ಆದರೆ, ಸ್ನೇಹಮಯಿ ಕೃಷ್ಣ ಅನುಮತಿ ಕೋರಿದರೂ ಅವರ ಜೊತೆಗಿನ ಚರ್ಚೆಯ ಕುರಿತ ಯಾವುದೇ ದಾಖಲೆ ಇಲ್ಲ. ಮತ್ತೊಬ್ಬ ದೂರುದಾರ ಪ್ರದೀಪ್ ಕುಮಾರ್ ವಿಚಾರದಲ್ಲೂ ಅದೇ ನಿಲುವನ್ನು ರಾಜ್ಯಪಾಲರು ಅನುಸರಿಸಿದ್ದಾರೆ” ಎಂದು ತಿಳಿಸಿದರು.
ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ, ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು.
ಇದನ್ನೂ ಓದಿ : ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ


