ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್‌ಪಿಸಿ ಸೆಕ್ಷನ್ 156 (3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ. ಈ ಅಧಿಕಾರ ಹೈಕೋರ್ಟ್‌ಗೆ ಸಂವಿಧಾನ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುವುದನ್ನು ಅರ್ಥೈಸಿಕೊಳ್ಳುವಲ್ಲಿ ಏಕಸದಸ್ಯ ಪೀಠ ವಿಫಲವಾಗಿದೆ. ಹಾಗಾಗಿ, ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಬೇರೆ ಯಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಣ ಕೋರಿದ್ದಾರೆ.
ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ದ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕಳೆದ ಫೆಬ್ರವರಿ 7ರಂದು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಲೋಕಾಯುಕ್ತದಿಂದ ಪಕ್ಷಪಾತ ಅಥವಾ ಕಳಪೆ ತನಿಖೆ ನಡೆಯುತ್ತಿದೆ ಎಂಬುವುದನ್ನು ರುಜುವಾತು ಮಾಡುವ ಯಾವುದೇ ಪುರಾವೆಗಳು ಇಲ್ಲ ಎಂದು ಹೈಕೋರ್ಟ್ ಹೇಳಿತ್ತು.
ಈ ನಡುವೆ ಕಳೆದ ತಿಂಗಳು ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿಯನ್ನು ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ


