ಜೆಡಿಎಸ್ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರವರು ತಿಳಿಸಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ ಅಥವಾ ವಿಲೀನಗೊಳ್ಳುತ್ತದೆ ಎಂಬ ಊಹಾಪೋಹಗಳಿಗೆ ಇಂದು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿರುವ ಅವರು, ನಾವು INDIA ಅಥವಾ NDA ಮೈತ್ರಿಕೂಟದ ಜೊತೆ ಸೇರುವುದಿಲ್ಲ ಎಂದಿದ್ದಾರೆ.
ಬಿಜೆಪಿಯವರೊಂದಿಗೆ ಸೇರಿ ಪ್ರತಿಭಟನೆ ಮಾಡಿದ ಮಾತ್ರಕ್ಕೆ ಕಥೆ ಹೆಣೆಯುವುದು ಬೇಡ. ಯಾವುದೇ ಪಕ್ಷದ ಕೂಟವನ್ನು ಸೇರದೆ ಜೆಡಿಎಸ್ ಜನರ ಬಳಿ ತೆರಳಲಿದೆ. ಪಕ್ಷಕ್ಕಾಗಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿದರೆ ಅಥವಾ ಬಿಜೆಪಿಯೊಂದಿಗೆ ವಿಲೀನ ಮಾಡಿದರೆ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ಆಮಿಷ ಒಡ್ಡಿದೆ ಎಂಬ ಚರ್ಚೆಗಳು ಕಳೆದೊಂದು ವಾರದಿಂದ ನಡೆಯುತ್ತಿವೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಪ್ರಧಾನಿ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಲು ಜೆಡಿಎಸ್ ತ್ಯಾಗ ಮಾಡಬೇಕು, ದೇಶಕ್ಕಾಗಿ ಬಿಜೆಪಿ ಜೊತೆ ಸೇರಬೇಕು ಎಂದು ಹೇಳಿಕೆ ನೀಡಿದ್ದರು.
ಆ ನಂತರ ವಿಧಾನಸಭಾ ಅಧಿವೇಶನದಲ್ಲಿ ಹೆಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಎಲ್ಲಾ ವಿರೋಧಗಳಿಗೆ ದನಿಗೂಡಿಸಿದ್ದರು. ಅಷ್ಟು ಮಾತ್ರವಲ್ಲದೇ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ INDIA ಸಭೆಯಲ್ಲಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಲೆಟರ್‌ಹೆಡ್‌ನಲ್ಲಿ ನೀಡಿದ ದೂರಿಗೆ ಕುಮಾರಸ್ವಾಮಿಯವರು ಸಹ ಸಹಿ ಹಾಕಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರ ಜತೆ ಗುರುವಾರ ರಾತ್ರಿ ಸಭೆ ನಡೆಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಒಗ್ಗಟ್ಟು ಕಾಯ್ದುಕೊಳ್ಳುವುದು, ಲೋಕಸಭಾ ಚುನಾವಣೆಯಲ್ಲಿ ಪಕ್ಷ ತಳೆಯಬೇಕಿರುವ ನಿಲುವು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲರ ಜತೆ ಸುದೀರ್ಘವಾಗಿ ಮಾತುಕತೆ ನಡೆಸಿದ ಪಕ್ಷದ ವರಿಷ್ಠರು, ವಿಧಾನಸಭಾ ಚುನಾವಣೆಯ ನಂತರದ ಬೆಳವಣಿಗೆಗಳ ಕುರಿತು ವಿಚಾರ ವಿನಿಮಯ ನಡೆಸಿದ್ದಾರೆ.
ಎಲ್ಲ ಶಾಸಕರು ಒಗ್ಗಟ್ಟಿನಿಂದ ಇರುವಂತೆ ದೇವೇಗೌಡರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೇರಬೇಕೆ? ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೆ? ಎಂಬುದರ ಕುರಿತು ಎಲ್ಲ ಶಾಸಕರಿಂದಲೂ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಇದನ್ನೂ ಓದಿ; ಬಿಜೆಪಿ ಲೆಟರ್ ಹೆಡ್‌ನಲ್ಲಿ ಕುಮಾರಸ್ವಾಮಿ ಸಹಿ: ಮತ್ತೆ ಮುನ್ನಲೆಗೆ ಬಂದ ಮೈತ್ರಿ ಚರ್ಚೆ


