ಕೇಂದ್ರ ಸರ್ಕಾರ ಕಳೆದ 14 ದಿನಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಂಡು ಕಠಿಣ ಕ್ರಮಗಳಿಂದಾಗಿ 23 ರಾಜ್ಯಗಳ 46 ಜಿಲ್ಲೆಗಳಲ್ಲಿ ಕಳೆದ ಎರಡು ವಾರದ ಅವಧಿಯಲ್ಲಿ ಯಾವುದೇ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.
ಆರಂಭದ ದಿನಗಳಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ಪೀಡಿತರು ಕಂಡು ಬಂದಿದ್ದರು. ಆದರೆ, ಕಳೆದ 14 ದಿನಗಳಲ್ಲಿ ಈ ಭಾಗದಲ್ಲಿ ಯಾವುದೇ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಚಿತ್ರದುರ್ಗ-ಶಿವಮೊಗ್ಗ ಸೇರಿದಂತೆ ದೇಶದ ಅನೇಕ ಜಿಲ್ಲೆಗಳಲ್ಲಿ ಇದುವರೆಗೂ ಯಾವುದೇ ಕೋವಿಡ್ ಪ್ರಕರಣಗಳು ಕಂಡುಬಂದಿಲ್ಲ ಎಂದು ಸಚಿವಾಲಯದ ಜಂಟಿಕಾರ್ಯದರ್ಶಿ ಲಾವ್ ಅಗರ್ ವಾಲ್ ಹೇಳಿದ್ದಾರೆ.
ಕೊರೋನಾ ಸಾಮೂದಾಯಿಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಿದ ನಂತರ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೈಗೊಂಡ ಕಠಿಣ ಕ್ರಮಗಳಿಂದ ಧನಾತ್ಮಕ ಫಲಿತಾಂಶಗಳು ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.
ಹೀಗಿದ್ದಾಗ್ಯೂ ಉಳಿದ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 43 ವ್ಯಕ್ತಿಗಳು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಏಪ್ರಿಲ್ 18ರ ಹೊತ್ತಿಗೆ ದೇಶದಲ್ಲಿ 480 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಇದೇ ಅವಧಿಯಲ್ಲಿ 991 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 14,378ಕ್ಕೆ ಏರಿಕೆಯಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲದಿರುವುದು ಧನಾತ್ಮಕ ಅಂಶವಾಗಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್?


