ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿರುವ ಇಂದು (ಆ.1) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಹಿಂಪಡೆಯಲು ಒತ್ತಾಯಿಸುವುದು ಮತ್ತು ಈ ಸಂಬಂಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆ ಇಂದು ಬೆಳಿಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಜೊತೆಗಿನ ಉಪಹಾರ ಕೂಟದಲ್ಲೂ ಚರ್ಚೆಯಾಗಿದೆ ಎಂದು ವರದಿಗಳು ಹೇಳಿವೆ.
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿರುವ ಅರ್ಜಿಯಲ್ಲಿನ ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
ಜುಲೈ 27ರಂದೇ ರಾಜ್ಯಪಾಲರಿಂದ ಮುಖ್ಯಮಂತ್ರಿಗೆ ನೋಟಿಸ್ ಬಂದಿದೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿ.ಜೆ ಅಬ್ರಹಾಂ ಅವರು 22 ಪುಟಗಳ ಅರ್ಜಿಯನ್ನು ಜುಲೈ 26ರಂದು ರಾಜ್ಯಪಾರಿಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 55.80 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಅಪಹರಣ ಪ್ರಕರಣ | ರೇವಣ್ಣ ಜಾಮೀನು ರದ್ದುಕೋರಿ ಎಸ್‌ಐಟಿ ಅರ್ಜಿ : ಆದೇಶ ಕಾಯ್ದಿರಿಸಿದ ಹೈಕೋರ್ಟ್


