ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಸತತ 9 ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಬೇಕು, ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ವಿಡಿಯೋ ಒಂದನ್ನು ಟ್ವೀಟ್ ಮಾಡಿರುವ ಅವರು, ಬಿಹಾರದಲ್ಲಿ ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸಿರವುದರಿಂದ ಬಿಹಾರದ ರೈತರಿಗೆ ಭಾರೀ ಅನಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಆದರೆ ಎನ್‌ಡಿಟಿವಿ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಸಾಕಷ್ಟು ಸಂಖ್ಯೆಯಲ್ಲಿ ಗೋಧಿ ಬೆಳೆಯುವ ಬಿಹಾರದ ರೈತರು ಸಮರ್ಪಕ ಮಾರುಕಟ್ಟೆ ವ್ಯವಸ್ಥೆ ಮತ್ತು ಕನಿಷ್ಠ ಬೆಂಬಲ ಬೆಲೆ ಇಲ್ಲದೆ ರೈತರ ಬೆಳೆಗಳು ಕೊಳೆಯುತ್ತಿವೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ. ಹಾಗಾಗಿ ಮೋದಿ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಬಿಹಾರದ ರೈತರನ್ನು ಸಂಕಷ್ಟಕ್ಕೆ ನೂಕಿದ ಪ್ರಧಾನಿ ಈಗ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಹೋರಾಟನಿರತ ರೈತರೊಂದಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇಡೀ ದೇಶದಲ್ಲಿ ಎಪಿಎಂಸಿ ಮಂಡಿಗಳನ್ನು ನಿರ್ನಾಮ ಮಾಡಲು, ಆ ಜಾಗದಲ್ಲಿ ಕಾರ್ಪೊರೇಟ್‌ಗಳಿಗೆ ಅವಕಾಶ ಮಾಡಿಕೊಡಲು ಮುಂದಾಗಿದೆ. ಇಡೀ ದೇಶದ ರೈತರು ಸಂಕಷ್ಟ ಅನುಭವಿಸಬೇಕೆಂದು ನೀವು ಬಯಸಿದರೆ ಮೋದಿಯನ್ನು ಬೆಂಬಲಿಸಿ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿದ ಸಚಿವರು: ಇಂದಿನ ಮಾತುಕತೆ ಕೊನೆಯದು ಎಂದ ರೈತರು