Homeಮುಖಪುಟಪತಂಜಲಿಯ ತಪ್ಪು ದಾರಿಗೆಳೆಯುವ ಜಾಹೀರಾತು: ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಎಂದ ಬಾಬಾ ರಾಮ್‌ದೇವ್, ಬಾಲಕೃಷ್ಣ

ಪತಂಜಲಿಯ ತಪ್ಪು ದಾರಿಗೆಳೆಯುವ ಜಾಹೀರಾತು: ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಎಂದ ಬಾಬಾ ರಾಮ್‌ದೇವ್, ಬಾಲಕೃಷ್ಣ

- Advertisement -
- Advertisement -

ಇಂದು (ಏ.16) ಸುಪ್ರೀಂ ಕೋರ್ಟ್‌ಗೆ ಖುದ್ದಾಗಿ ಹಾಜರಾದ ಪತಂಜಲಿ ಆಯುರ್ವೇದ ಲಿಮಿಟೆಡ್‌ನ ಸಹ-ಸಂಸ್ಥಾಪಕ ಬಾಬಾ ರಾಮ್‌ದೇವ್, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಅಲೋಪತಿ ಔಷಧಿಗಳ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಪತಂಜಲಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಕೂಡ ನ್ಯಾಯಾಲಯಕ್ಕೆ ಖುದ್ದಾಗಿ ಕ್ಷಮೆ ಯಾಚಿಸಿದ್ದಾರೆ. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಪತಂಜಲಿಯ ಇಬ್ಬರೂ ಮುಖ್ಯಸ್ಥರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಸಿದ್ಧರಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ತಪ್ಪು ದಾರಿಗೆಳೆಯುವ ಜಾಹೀರಾತಿಗೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಲಿಮಿಟೆಡ್‌, ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.

ಇಂದಿನ ವಿಚಾರಣೆಯಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿತು ಮತ್ತು ನ್ಯಾಯಾಲಯಕ್ಕೆ ನೀಡಲಾದ ಭರವಸೆಯನ್ನು ಉಲ್ಲಂಘಿಸಿದ್ದು ಏಕೆ? ಎಂದು ಪ್ರಶ್ನಿಸಿದೆ. ಪೀಠವು ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.

ಏಪ್ರಿಲ್ 2ರಂದು, ಪತಂಜಲಿ ಎಂಡಿ ಸಲ್ಲಿಸಿದ ಕ್ಷಮಾಪಣೆಯ ಮೊದಲ ಅಫಿಡವಿಟ್ ಅನ್ನು ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು. ಕಳೆದ ವಾರ (ಏಪ್ರಿಲ್ 10), ಪತಂಜಲಿ ಎಂಡಿ ಸಲ್ಲಿಸಿದ್ದ ಕ್ಷಮಾಪಣೆಯ ಎರಡನೇ ಅಫಿಡವಿಟ್ ಅನ್ನೂ ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು.

ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ಹಾಜರಾಗುವುದನ್ನು ತಪ್ಪಿಸಲು ಬಾಲಕೃಷ್ಣ ಮತ್ತು ರಾಮ್‌ದೇವ್ ಅವರು ಅಸ್ತಿತ್ವದಲ್ಲಿಲ್ಲದ ವಿಮಾನ ಟಿಕೆಟ್‌ಗಳೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು.

ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954 ರ ಅಡಿಯಲ್ಲಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಉತ್ತರಾಖಂಡ ರಾಜ್ಯದ ಅಧಿಕಾರಿಗಳನ್ನು ನ್ಯಾಯಾಲಯವು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಲೋಪತಿಯ ವಿರುದ್ಧದ ಪತಂಜಲಿಯ ಜಾಹೀರಾತುಗಳು ಮತ್ತು ಕೆಲ ರೋಗಗಳನ್ನು ಗುಣಪಡಿಸುವ ಬಗ್ಗೆ ಹಕ್ಕುಗಳನ್ನು ನೀಡುವುದರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಈ ಹಿಂದೆ ಪತಂಜಲಿ ಆಯುರ್ವೇದ, ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು.

ಇದನ್ನೂ ಓದಿ : ಪತಂಜಲಿ ದಾರಿ ತಪ್ಪಿಸುವ ಜಾಹೀರಾತು ಪ್ರಕರಣ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರಾಮ್‌ದೇವ್‌ಗೆ ಸುಪ್ರೀಂ ತಪರಾಕಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...