ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಮೊದಲ ಆರೋಪಿಯಾಗಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನ ವಿಶೇಷ ಸತ್ರ ನ್ಯಾಯಾಲಯವು ಮಂಗಳವಾರ (ನವೆಂಬರ್ 18) ಸಮನ್ಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿ.ಎಸ್ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಅವರಿಗೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶರಾದ ಎಸ್. ಸುಜಾತಾ ಅವರು ಸಮನ್ಸ್ ಜಾರಿಗೊಳಿಸಿ, ಡಿಸೆಂಬರ್ 2ಕ್ಕೆ ಖುದ್ದು ಹಾಜರಾಗಲು ನಿರ್ದೇಶಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಅವರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಧೀಶರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕು ಎಂಬ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಇತರರಿಗೆ ಸಮನ್ಸ್ ಜಾರಿಗೆ ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.
ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಫೆಬ್ರವರಿ 28ರ ಆದೇಶವನ್ನು ನವೆಂಬರ್ 13ರಂದು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಎರಡನೇ ಬಾರಿಗೆ ಸಂಜ್ಞೇ ಪರಿಗಣಿಸಿ ಸಮನ್ಸ್ ಜಾರಿಗೊಳಿಸಿದ್ದ ವಿಚಾರಣಾ ನ್ಯಾಯಾಲಯ ಕ್ರಮ ಪ್ರಶ್ನಿಸಿ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಇದಕ್ಕೂ ಮುನ್ನ ಫೆಬ್ರವರಿ 7ರಂದು ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿತ್ತು. ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.


