ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮ ಖಂಡಿಸಿ ರಾಜ್ಯದ ವಿವಿದೆಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ಸಿಎಂ ವಿರುದ್ದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದರ ಹಿಂದೆ ಬಿಜೆಪಿ-ಜೆಡಿಎಸ್ ಕೈವಾಡ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಶಿಕಾರಿಪುರದ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರು.
ಇಂದು (ಆ.19) ಮಂಗಳೂರು ನಗರದಲ್ಲಿ ಖಾಸಗಿ ಬಸ್ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ನಗರದ ಸ್ಟೇಟ್ ಬ್ಯಾಂಕ್‌ನಿಂದ ಜೋಕಟ್ಟೆಗೆ ತೆರಳುವ ಮೌಲಾ ‘2’ಸಿಟಿ ಬಸ್‌ಗೆ ಲಾಲ್‌ಬಾಗ್‌ನಲ್ಲಿ ಕಲ್ಲು ತೂರಲಾಗಿದೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ನಗರದ ಲಾಲ್‌ಬಾಗ್‌ನ ಪಾಲಿಕೆ ಕಚೇರಿ ಎದುರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಸ್ತೆ ತಡೆದು, ಟೈರ್ ಸುಟ್ಟು ಪ್ರತಿಭಟಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನಪರಿಷತ್ ಸದಸ್ಯ ಜಗದೇವ್ ಕಾಳಗಿ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಜರ್ ಆಲಂ ಖಾನ್, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ನಗರದ ಗಾಂಧಿ ವೃತ್ತ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದರು. ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಮಾಜಿ ಸಚಿವೆ ಉಮಾಶ್ರೀ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ನಗರದ ಶಿವಪ್ಪ ನಾಯಕ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯ ಬಲ್ಕಿಷ್ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಮುಡಾ ಪ್ರಕರಣ | ಸಿಎಂ ಅರ್ಜಿಗಳನ್ನು ವಿಚಾರಣೆ ನಡೆಸದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ


